Mysuru Dasara 2025: ನಾಳೆ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಜಂಬೂ ಸವಾರಿ; ಎಷ್ಟೊತ್ತಿಗೆ ಆರಂಭ?
Jamboo Savari: ಜಂಬೂ ಸವಾರಿ ವೀಕ್ಷಣೆಗಾಗಿ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸುಮಾರು 45 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಜಂಬೂ ಸವಾರಿ ಹಿನ್ನೆಲೆಯಲ್ಲಿ ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ಹಾಗೂ ಮೈಸೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

-

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ (Mysuru Dasara 2025) ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ (ಅ.2) ದಸರಾ ಗಜಪಡೆಯ ನಾಯಕ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗಲಿದ್ದಾನೆ. ಈ ಅಪರೂಪದ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಜನರು ಕಾತರದಿಂದ ಕಾಯುತ್ತಿದ್ದಾರೆ. ದಸರಾ ಮೆರವಣಿಗೆ ಹಾಗೂ ಜಂಬೂ ಸವಾರಿ ಎಷ್ಟೊತ್ತಿಗೆ ಶುರುವಾಗಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.
ಈ ಬಾರಿಯ ನಾಡಹಬ್ಬ ದಸರಾವು 11 ದಿನಗಳ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಮುಕ್ತಾಯದ ಹಂತಕ್ಕೆ ಬಂದಿದೆ. ನಾಳೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಜಗತ್ಪ್ರಸಿದ್ದ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಅಭಿಮನ್ಯು ಆನೆಯು ಅರಮನೆ ಬಳಿಯಿಂದ ಚಿನ್ನದ ಅಂಬಾರಿಯನ್ನು ಹೊತ್ತು ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂ ಬಜಾರ್ ಮೂಲಕ ಬನ್ನಿಮಂಟಪದವರೆಗೆ ಸುಮಾರು 5 ಕಿ.ಮೀ. ದೂರ ಸಾಗಲಿದೆ. ಜಂಬೂ ಸವಾರಿಗೆ ಆಕರ್ಷಕ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳು ಸಾಥ್ ನೀಡುವ ಮೂಲಕ ಮೆರವಣಿಗೆಯನ್ನು ಮತ್ತಷ್ಟು ಮೆರುಗುಗೊಳಿಸಲಿವೆ.
ಧನುರ್ ಲಗ್ನದಲ್ಲಿ ದಸರಾ ಮೆರವಣಿಗೆಗೆ ಚಾಲನೆ:
ಸಿಎಂ ಸಿದ್ದರಾಮಯ್ಯ ಅವರು ನಾಳೆ ಮಧ್ಯಾಹ್ನ 1ರಿಂದ 1.18ರ ಶುಭ ಧನುರ್ ಲಗ್ನದ ಶುಭ ಮುಹೂರ್ತದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ಮೆರವಣಿಗೆಯಲ್ಲಿ ನಿಶಾನೆ ಆನೆಗಳು, ನೌಪತ್ ಹಾಗೂ ಸಾಲಾನೆಗಳ ಜೊತೆಗೆ 100ಕ್ಕೂ ಹೆಚ್ಚು ಕಲಾ ತಂಡಗಳು, 60ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, ಅಶ್ವಾರೋಹಿ ದಳ, ಪೊಲೀಸ್ ಬ್ಯಾಂಡ್ ಹಾಗೂ ಪೊಲೀಸ್ ತುಕಡಿಗಳು ಸಾಗಲಿವೆ.
ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ:
ನಂತರ ಕುಂಭ ಲಗ್ನದಲ್ಲಿ ಸಂಜೆ 4.42ರಿಂದ 5.06 ವರೆಗಿನ ಶುಭ ಮುಹೂರ್ತದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿ ದೇವಿಗೆಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಆರಂಭವಾಗಲಿದೆ. ಈ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ನುಡಿಸಲಿದ್ದು, ಪಿರಂಗಿ ದಳವು 21 ಸುತ್ತು ಕುಶಾಲತೋಪುಗಳನ್ನು ಸಿಡಿಸಲಿದೆ. 6ನೇ ಬಾರಿಗೆ ಅಭಿಮನ್ಯು ಚಿನ್ನದ ಅಂಬಾರಿಯನ್ನು ಹೊರಲಿದೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪಾ ಸಾಥ್ ನೀಡಲಿವೆ.
ಈ ಸುದ್ದಿಯನ್ನೂ ಓದಿ | Mysuru Dasara 2025: ಮೈಸೂರು ಅರಮನೆಯಲ್ಲಿ ‘ಆಯುಧ ಪೂಜೆ’ ನೆರವೇರಿಸಿದ ಯದುವೀರ್ ಒಡೆಯರ್
ಜಂಬೂ ಸವಾರಿ ವೀಕ್ಷಣೆಗಾಗಿ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸುಮಾರು 45 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ನಂತರ ರಾತ್ರಿ 7 ಗಂಟೆಗೆ ಬನ್ನಿಮಂಪಟದಲ್ಲಿ ಪಂಜಿನ ಕವಾಯತು ಇರಲಿದೆ. ಇದರೊಂದಿಗೆ ದಸರಾ ಆಚರಣೆಯು ಅಂತ್ಯವಾಗಲಿದೆ. ಜಂಬೂ ಸವಾರಿ ಹಿನ್ನೆಲೆಯಲ್ಲಿ ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ಹಾಗೂ ಮೈಸೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೈಸೂರು ನಗರದಲ್ಲಿ ಭದ್ರತೆಗಾಗಿ ಸುಮಾರು 6,384 ಪೊಲೀಸರನ್ನು ನಿಯೋಜಿಸಲಾಗಿದೆ.