Nazeer Ahmed: ಹೈಕಮಾಂಡ್ ಕಠಿಣ ನಿಲುವು, ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್ ರಾಜೀನಾಮೆ
ಪಕ್ಷದ ವರಿಷ್ಠರ ಕಠಿಣ ನಿಲುವಿನಿಂದಾಗಿ ಅನಿವಾರ್ಯ ಪರಿಸ್ಥಿತಿ ಎದುರಿಸಿದ ನಜೀರ್ ಅಹ್ಮದ್, ಕೊನೆಗೂ ತಮ್ಮ ರಾಜೀನಾಮೆ ಪತ್ರವನ್ನು ಸಿದ್ಧಪಡಿಸಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ. ಆ ಮೂಲಕ ಕಳೆದ ಕೆಲವು ದಿನಗಳಿಂದ ಈ ಹುದ್ದೆಯ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಬಿದ್ದಂತಾಗಿದೆ.
ಸಿಎಂ ಸಿದ್ದರಾಮಯ್ಯ, ನಜೀರ್ ಅಹ್ಮದ್ -
ಬೆಂಗಳೂರು, ಏ.14: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್ (nazeer ahmed) ಅವರು ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನೀಡಿದ್ದ ಕಟ್ಟುನಿಟ್ಟಿನ ಸೂಚನೆ ಹಾಗೂ ಗಡುವಿನ ಬೆನ್ನಲ್ಲೇ ನಜೀರ್ ಅಹ್ಮದ್ ಈ ನಿರ್ಧಾರ ಕೈಗೊಂಡಿದ್ದಾರೆ.
ಸೋಮವಾರ (ಏಪ್ರಿಲ್ 13) ರಂದು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಜೀರ್ ಅಹ್ಮದ್ ಅವರಿಗೆ ರಾಜೀನಾಮೆ ನೀಡುವಂತೆ ಅಂತಿಮ ಗಡುವು (ಡೆಡ್ಲೈನ್) ನೀಡಿದ್ದರು. ಅಷ್ಟೇ ಅಲ್ಲದೆ, ಸೋಮವಾರ ಸಂಜೆಯೊಳಗೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡದಿದ್ದರೆ, ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಪಕ್ಷದ ವರಿಷ್ಠರ ಕಠಿಣ ನಿಲುವಿನಿಂದಾಗಿ ಅನಿವಾರ್ಯ ಪರಿಸ್ಥಿತಿ ಎದುರಿಸಿದ ನಜೀರ್ ಅಹ್ಮದ್, ಕೊನೆಗೂ ತಮ್ಮ ರಾಜೀನಾಮೆ ಪತ್ರವನ್ನು ಸಿದ್ಧಪಡಿಸಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ. ಆ ಮೂಲಕ ಕಳೆದ ಕೆಲವು ದಿನಗಳಿಂದ ಈ ಹುದ್ದೆಯ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಬಿದ್ದಂತಾಗಿದೆ.
CM Siddaramaiah: ಅಬ್ದುಲ್ ಜಬ್ಬಾರ್ ನಂತರ ಕಾಂಗ್ರೆಸ್‌ನಲ್ಲಿ ಶೀಘ್ರ ಮತ್ತೊಂದು ತಲೆದಂಡ! ಸಿಎಂ ಸಿದ್ದರಾಮಯ್ಯ ಸುಳಿವು
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಸಿಗದ ಕಾರಣಕ್ಕೆ ನಸೀರ್ ಅಹ್ಮದ್ ಅವರು ಪ್ರಚಾರದಿಂದ ದೂರ ಉಳಿದಿದ್ದರು. ಇದರಿಂದ ಸಿಟ್ಟಿಗೆದ್ದ ಹೈಕಮಾಂಡ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಾಕೀತು ಮಾಡಿತ್ತು. ನಸೀರ್ ಅಹಮದ್ ಅವರ ವಿಧಾನ ಪರಿಷತ್ತಿನ ಸದಸ್ಯತ್ವ ಅವಧಿ ಬರುವ ಮೇನಲ್ಲಿ ಪೂರ್ಣಗೊಳ್ಳಲಿತ್ತು.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗದೆ, ಪಕ್ಷದ ಒಂದಿಷ್ಟು ಅಲ್ಪಸಂಖ್ಯಾತ ಹಿರಿಯ ಮುಖಂಡರು ಪಕ್ಷವನ್ನು ಸೋಲಿಸಲು ಹುನ್ನಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ವರಿಷ್ಠರು, ಮೇಲ್ಮನೆ ಸದಸ್ಯರಾದ ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹಮದ್ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಬ್ಬಾರ್ ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ನಸೀರ್ ಅವರ ರಾಜೀನಾಮೆ ಬಂದಿದೆ.