ಬೆಂಗಳೂರು: ನೇಪಾಳದಲ್ಲಿ ನಡೆದ ಪ್ರತಿಭಟನೆ (Nepal Riots, Nepal Gen Z protests) ಹಿಂಸಾಚಾರಕ್ಕೆ ತಿರುಗಿದ್ದು, ಘಟನೆ ಬೆನ್ನಲ್ಲೇ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಕಠ್ಮಂಡು ವಿಮಾನ ನಿಲ್ದಾಣದಲ್ಲಿ (Kathmandu Airport) ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ (Shalini Rajanish) ಅವರಿಗೆ ಸೂಚನೆ ನೀಡಿದ್ದಾರೆ.
ನೇಪಾಳ ಪರಿಸ್ಥಿತಿ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಮುಖ್ಯ ಕಾರ್ಯದರ್ಶಿಗಳು ಈ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಂಡಿದ್ದು, ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ.
ನೇಪಾಳದ ಕೆಪಿ ಓಲಿ ಸರ್ಕಾರವು ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಸರ್ಕಾರದಲ್ಲಿ ನೋಂದಾಯಿಸಲು ವಿಫಲವಾದ ಕಾರಣ ನೇಪಾಳ ಸರ್ಕಾರ ಈ ಕ್ರಮಕ್ಕೆ ಮುಂದಾಗಿತ್ತು. ಈ ಆದೇಶದ ಬೆನ್ನಲ್ಲೇ ಸರ್ಕಾರದ ವಿರುದ್ಧ ಝೆನ್ ಜಿ ತಿರುಗಿ ಬಿದ್ದಿತ್ತು. ಯುವಕರ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಕನಿಷ್ಠ 19 ಜನರ ಸತ್ತಿದ್ದಾರೆ.
ಇದನ್ನೂ ಓದಿ: Nepal Gen Z Protest: ಮಾಜಿ ಪ್ರಧಾನಿಗೆ Gen Z ಗಳಿಂದ ಮನಸೋಇಚ್ಛೆ ಹಲ್ಲೆ; ವಿಡಿಯೋ ವೈರಲ್