ನಾಗಮಂಗಲ, ಏ.8: ಮಂಡ್ಯ (mandya) ಜಿಲ್ಲೆ ನಾಗಮಂಗಲ ತಾಲೂಕಿನ ಧಾರ್ಮಿಕ ಮತ್ತು ಆಧ್ಯಾತ್ಮಿಕ ಪುಣ್ಯ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ (Sri Adichunchanagiri Mutt) ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಏ.15ರಂದು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಏ.15ರಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ದೇವಾಲಯ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಶ್ರೀಕ್ಷೇತ್ರದಲ್ಲಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಮಂದಿರದಲ್ಲಿ ಡಾ.ಬಾಲಗಂಗಾಧರನಾಥ ಶ್ರೀಗಳ ಮೂಲ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಏ.10ರಿಂದ 15ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿವೆ. ಏ.15ರಂದು ಬೆಳಗ್ಗೆ ಶ್ರೀಗುರು ಭೈರವೈಕ್ಯ ಮಂದಿರವನ್ನು ಮೋದಿ ಉದ್ಘಾಟಿಸಲಿದ್ದಾರೆ.
ಬಳಿಕ, ಬಿಜಿಎಸ್ ಕ್ರೀಡಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಶ್ರೀಗಳ ಆಶಯದಂತೆ 175 *150 ಅಡಿ ವಿಸ್ತೀರ್ಣದಲ್ಲಿ ಕೆಂಪು ಶಿಲೆ ಮತ್ತು ವಿವಿಧ ಬಗೆಯ ಶಿಲಾ ಕಲ್ಲುಗಳಿಂದ ಶ್ರೀಗುರು ಭೈರವೈಕ್ಯ ಮಂದಿರ ನಿರ್ಮಾಣಗೊಂಡಿದೆ.