CM Siddaramaiah: ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ
CM Siddaramaiah: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ವ್ಯಕ್ತಿ ಕೊಲೆ ಪ್ರಕರಣದಲ್ಲಿ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ವ್ಯಕ್ತಿ ಕೊಲೆ ಪ್ರಕರಣದಲ್ಲಿ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಕರಣದಲ್ಲಿ 15 ಜನರ ಬಂಧನ
ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯದ ವೇಳೆ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಕೇರಳದ ವಯನಾಡ್ ಮೂಲದ ಮೂಲದ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದ್ದ ಘಟನೆ ಭಾನುವಾರ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ 15 ಜನರನ್ನು ಬಂಧಿಸಲಾಗಿದೆ. ಮೃತ ವ್ಯಕ್ತಿಯನ್ನು ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ಅಶ್ರಫ್ ಎಂದು ಗುರುತಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ.
ಈ ಬಗ್ಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ್ದ ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ್ ಅವರು, 'ಮಂಗಳೂರಿನಲ್ಲಿ ಗುಂಪು ಹಲ್ಲೆ ನಡೆದಿದೆ. ಇದರಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ ಆತ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗುತ್ತಿದ್ದ ಎಂದು ಹೇಳಲಾಗಿದೆ. ಹೀಗಂಥ ನನಗೆ ಮಾಹಿತಿ ಬಂದಿದೆ ಎಂದು ಹೇಳಿದ್ದರು.
ಈ ಕೊಲೆ ಆತಂಕಕಾರಿ ಎಂದು ಹೇಳಿದ್ದ ಗೃಹ ಸಚಿವರು, ಯಾವುದೇ ಕಾರಣಕ್ಕೂ ಹಿಂಸೆಯನ್ನು ಒಪ್ಪಲು ಸಾಧ್ಯವಿಲ್ಲ. ಯಾರಾದರೂ ತಪ್ಪು ಹೇಳಿಕೆ ನೀಡಿದ್ದರೂ, ಕಾನೂನು ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ, ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಅವರು ತಿಳಿಸಿದ್ದರು.
ಈ ಸುದ್ದಿಯನ್ನೂ ಓದಿ | Murder Case: ಅನೈತಿಕ ಸಂಬಂಧ ಶಂಕೆ; 3 ವರ್ಷದ ಮಗು ಎದುರೇ ದಂಪತಿಯ ಬರ್ಬರ ಹತ್ಯೆ!