HD Kumaraswamy: ಕೇಂದ್ರ ಸಚಿವ ಎಚ್‌ಡಿಕೆಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್; ನ್ಯಾಯಾಂಗ ನಿಂದನೆ ವಿಚಾರಣೆಗೆ ತಡೆ
Supreme Court: ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.


ಹೊಸದಿಲ್ಲಿ: ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme court) ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಾಮೂರ್ತಿ ಪ್ರಸನ್ನ ಬಿ. ವರಾಳೆ ಅವರಿದ್ದ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸದಂತೆ ಆದೇಶ ಹೊರಡಿಸಿದೆ. ಈ ಮೂಲಕ ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯ ಪ್ರವೇಶ ಮಾಡಲು ಅನುಮತಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಪೀಠವು ಹೈಕೋರ್ಟ್‌ನ ಮಧ್ಯಪ್ರವೇಶಿಕೆ ಆದೇಶಕ್ಕೆ ತಡೆ ನೀಡಿ, ಪ್ರತಿವಾದಿ ಸಮಾಜ ಪರಿವರ್ತನಾ ಸಮುದಾಯಕ್ಕೆ ನೋಟಿಸ್ ಜಾರಿ ಮಾಡಿತು.
ಕುಮಾರಸ್ವಾಮಿ ಪರವಾಗಿ ಹಿರಿಯ ವಕೀಲ ಸಿ.ಆರ್ಯಮ ಸುಂದರಮ್, ಸಮಾಜ ಪರಿವರ್ತನಾ ಸಮುದಾಯದ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದರು.
ಈ ಸುದ್ದಿಯನ್ನೂ ಓದಿ: Actor Darshan: ದರ್ಶನ್‌ಗೆ ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ವಿವೇಚನೆ ಬಳಸಿಲ್ಲ; ಸುಪ್ರೀಂ ಕೋರ್ಟ್ ಆಕ್ಷೇಪ
ಪ್ರಕರಣದ ಹಿನ್ನೆಲೆ
ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿನ ಸರ್ವೇ ನಂಬರ್ 7, 8, 9, 10, 16, 17 ಮತ್ತು 79ರ ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂದು ಮಾಜಿ ಸಂಸದ ಜಿ.ಮಾದೇಗೌಡ 2011ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಒತ್ತುವರಿಗೆ ಒಳಗಾಗಿರುವ ಜಾಗವು ಸುಮಾರು 200 ಎಕರೆ ವ್ಯಾಪ್ತಿಯದ್ದಾಗಿದ್ದು, ಇದರಲ್ಲಿ 110 ಎಕರೆ ಗೋಮಾಳ ಪ್ರದೇಶವೂ ಸೇರಿತ್ತು. ಈ ಸಂಬಂಧ ತನಿಖೆ ನಡೆಸುವಂತೆ 2014ರಲ್ಲಿ ಲೋಕಾಯುಕ್ತವು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಅಲ್ಲದೆ ಅಕ್ರಮ ಒತ್ತುವರಿ ತೆರವು ಮಾಡುವಂತೆಯೂ ಸೂಚಿಸಿತ್ತು.
ಇದನ್ನು ಆಧರಿಸಿ ಸರ್ಕಾರೇತರ ಸಂಸ್ಥೆ ಸಮಾಜ ಪರಿವರ್ತನಾ ಸಮುದಾಯವು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಲೋಕಾಯುಕ್ತ ವರದಿ ಅನ್ವಯ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಸರ್ಕಾರದ ಮುಚ್ಚಳಿಕೆ ಆಧರಿಸಿ ಹೈಕೋರ್ಟ್ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿತ್ತು. ಈ ಆದೇಶ ಜಾರಿ ಮಾಡದೆ ಇದ್ದುದನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.
ಇತ್ತ ಒತ್ತುವರಿಯನ್ನು ತೆರವು ಮಾಡಲು ರಾಜ್ಯ ಸರ್ಕಾರವು ವಿಶೇಷ ತನಿಖಾ ದಳ ರಚಿಸಿತ್ತು. ಇದರ ಭಾಗವಾಗಿ ಒತ್ತುವರಿ ತೆರವುಗೊಳಿಸಲು ಕುಮಾರಸ್ವಾಮಿ ಅವರಿಗೆ ರಾಮನಗರ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಇದನ್ನು ಹೈಕೋರ್ಟ್ ಇತ್ಯರ್ಥಪಡಿಸುವಂತೆ ಸೂಚಿಸಿತ್ತು.
2025ರ ಏ. 17ರಂದು ಹೈಕೋರ್ಟ್ ಕುಮಾರಸ್ವಾಮಿ ಅವರನ್ನು ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಆರೋಪಿಯನ್ನಾಗಿಸಿತ್ತು. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಲ್ಲಿ ಇದೀಗ ಕುಮಾರಸ್ವಾಮಿ ಅವರಿಗೆ ರಿಲೀಫ್ ಸಿಕ್ಕಿದೆ.