ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಐವರು ಆರೋಪಿಗಳಿಗೆ ನೀಡಲಾಗಿದ್ದ ಜಾಮೀನು ರದ್ದು ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ. ಎ-3: ಪವನ್ (ಪುಟ್ಟಸ್ವಾಮಿ), ಎ-4: ರಾಘವೇಂದ್ರ, ಎ-5: ನಂದೀಶ್, ಎ-9: ಧನರಾಜ್, ಎ-10: ವಿನಯ್‌ಗೆ ನೀಡಲಾಗಿದ್ದ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಪ್ರಾಸಿಕ್ಯೂಷನ್ ಮನವಿಯನ್ನು ತಿರಸ್ಕರಿಸಿದೆ. ಆರೋಪಿಗಳಿಗೆ ಜಾಮೀನು ಮಂಜೂರಾಗಿ ಸುಮಾರು ಒಂದೂವರೆ ವರ್ಷಗಳ ಸುದೀರ್ಘ ಅವಧಿ ಕಳೆದ ಬಳಿಕ, ಜಾಮೀನು ರದ್ದತಿಗೆ ಕೋರಿ ಮೇಲ್ಮನವಿ ಸಲ್ಲಿಸಿರುವುದನ್ನು ನ್ಯಾಯಪೀಠ ಗಂಭೀರವಾಗಿ ಪರಿಗಣಿಸಿತು. ವಿಳಂಬದ ಹಿನ್ನೆಲೆಯಲ್ಲಿ ಜಾಮೀನು ರದ್ದುಗೊಳಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಅರ್ಜಿಯನ್ನು ವಜಾ ಮಾಡಿ ಮಹತ್ವದ ಆದೇಶ ಹೊರಡಿಸಿದೆ.
2024ರ ಡಿಸೆಂಬರ್ 23ರಂದು ಬೆಂಗಳೂರಿನ ವಿಚಾರಣಾ ನ್ಯಾಯಾಲಯವು ಈ ಐವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಕಾಮಾಕ್ಷಿಪಾಳ್ಯ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು 2026ರ ಜೂನ್ 10ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ, ಜಾಮೀನನ್ನು ಎತ್ತಿಹಿಡಿದಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ಜೈಲಿನಲ್ಲಿಯೇ ದರ್ಶನ್‌ಗೆ ಚಿಕಿತ್ಸೆ
ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರಿಗೆ ಅಗತ್ಯವಿದ್ದರೆ ಬೆಂಗಳೂರಿನ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು 59ನೇ ಸಿಸಿಎಚ್ ನ್ಯಾಯಾಲಯವು ಜೈಲು ಅಧಿಕಾರಿಗಳಿಗೆ ಅನುಮತಿ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ವೈದ್ಯಾಧಿಕಾರಿಗಳು ಸಲ್ಲಿಸಿದ ವೈದ್ಯಕೀಯ ವರದಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ಜೈಲಿನಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ವೈದ್ಯಕೀಯ ಅಗತ್ಯ ಕಂಡುಬಂದರೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಿಸುವಂತೆ ಸೂಚಿಸಿದ್ದಾರೆ.