ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Saalumarada Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಸಾಲುಮರದ ತಿಮ್ಮಕ್ಕ ನಿಧನ: ಪರಿಸರ ಮಾತೆ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ(114) ಇಂದು ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಸಾಲುಮರದ ತಿಮ್ಮಕ್ಕ(ಸಂಗ್ರಹ ಚಿತ್ರ) -

Rakshita Karkera
Rakshita Karkera Nov 14, 2025 12:27 PM

ಬೆಂಗಳೂರು: ಪರಿಸರ ಮಾತೆ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ(114)(Saalumarada Thimmakka) ಇಂದು ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 114 ವರ್ಷ ವಯಸ್ಸಿನ ಸಾಲು ಮರದ ತಿಮ್ಮಕ್ಕ ಕಳೆದ ಕೆಲವು ದಿನಗಳ ಹಿಂದೆ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದೆ ಚಿಕಿತ್ಸೆ ಫಲಕಾರಿಯಾಗದೇ ಇಂದು 12ಗಂಟೆಗೆ ವಿಧಿವಶರಾಗಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ ಅವರು ವೃಕ್ಷಮಾತೆ ಎಂದೇ ಜನ ಜನಿತರಾದವರು. ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದ ತಿಮ್ಮಕ್ಕ ಅವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಹೀಗಾಗಿ ಅವರು ಕೊನೆಗೆ ಸಾಲು ಮರದ ತಿಮ್ಮಕ್ಕ ಎಂದೇ ಪ್ರಸಿದ್ಧರಾದರು. ಇವರ ಈ ಪರಿಸರ ಪ್ರೇಮವನ್ನು ಗುರುತಿಸಿ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.

ಈ ಸುದ್ದಿಯನ್ನೂ ಓದಿ: Saalumarada Thimmakka: ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಇನ್ನು ಸಾಲುಮರದ ತಿಮ್ಮಕ್ಕನ ಅವರ ಅಗಲಿಕೆಗೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಉಸಿರು ಚೆಲ್ಲಿದ "ವೃಕ್ಷಮಾತೆ" ಮರಗಳನ್ನೇ ತಮ್ಮ ಮಕ್ಕಳಂತೆ ಸಾಕಿ ಸಲಹಿದ ʻವೃಕ್ಷಮಾತೆʼ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ನಿಧನರಾದ ಸುದ್ದಿ ಅತೀವ ದುಖಃ ನೀಡಿದೆ. ನಿಸರ್ಗ ಪ್ರೀತಿಯ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದ ಅವರ ಅಸಾಮಾನ್ಯ ಬದುಕು ಮತ್ತು ಪರಿಸರಕ್ಕೆ ಅವರ ಕೊಡುಗೆ ಚಿರಸ್ಮರಣೀಯ. ವೃಕ್ಷಮಾತೆ ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕಾರ್ಯ ಸದಾ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿ ಉಳಿಯಲಿದೆ ಎಂದು ಬರೆದಿದ್ದಾರೆ.



ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಸ್ತೆ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ‘ಮರಗಳೇ ನನ್ನ ಮಕ್ಕಳು’ ಎಂದು ಘೋಷಿಸಿದ ವೃಕ್ಷಮಾತೆ, ನಮ್ಮ ಹೆಮ್ಮೆಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ತಿಮ್ಮಕ್ಕನವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಪರಿಸರ ಸೇವೆಯನ್ನೇ ಮಾದರಿಯಾಗಿಸಿಕೊಂಡು ನಮ್ಮ ಸುತ್ತಮುತ್ತಲಿನ ಪರಿಸರವನ್ನ ಉಳಿಸಿ, ಬೆಳೆಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ ಎಂದು ಪೋಸ್ಟ್‌ ಮಾಡಿದ್ದಾರೆ.