ಶಿವಮೊಗ್ಗ: ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ಹೆಸರಿಡಲು ಕೋರಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸಾಗರದ ರೈತ ಹರನಾಥರಾವ್ ಅವರು ಈ ಅರ್ಜಿ ಸಲ್ಲಿಸಿದ್ದು, ನಾಳೆ ಈ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಬಿ.ಎಸ್. ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನೀಡಿದ ಕೊಡುಗೆ ಹಾಗೂ ಸಿಗಂದೂರು ಸೇತುವೆ (Sigandur Bridge) ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವುದನ್ನು ಪರಿಗಣಿಸಿ, ಉದ್ಘಾಟನೆಗೆ ಸಿದ್ಧವಾಗಿರುವ ಸಿಗಂದೂರು ಸೇತುವೆಗೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಅವರು ಕೋರಿದ್ದಾರೆ.
ಈ ಕುರಿತು ವಕೀಲ ಶಿವಶ್ರೀನಿವಾಸ್ ಮತ್ತು ಸಂತೋಷ್ ಅವರು ವಾದ ಮಂಡಿಸಲಿದ್ದಾರೆ. ನ್ಯಾ. ಸುನೀತಾ ದತ್ತ ಯಾದವ್ ಅವರು ವಿಚಾರಣೆ ನಡೆಸಲಿದ್ದಾರೆ. ಈ ಸಂಬಂಧ ಹರನಾಥರಾವ್, ರಾಷ್ಟ್ರೀಯ ಹೆದ್ದಾರಿ ಇಲಾಖೆ ಕಾರ್ಯದರ್ಶಿಗಳಿಗೂ ಪತ್ರ ಬರೆದಿದ್ದು, ಜು.14ರಂದು ಉದ್ಘಾಟನೆಯಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಗೆ ಬರುವ ಸಿಗಂದೂರು ಸೇತುವೆಗೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಮನವಿ ಮಾಡಿದ್ದಾರೆ.
ಸುಮಾರು 424 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆ 2.44 ಕಿ.ಮೀ ಉದ್ದವಿದ್ದು, 16 ಮೀಟರ್ ಅಗಲವಿದೆ. ಭಾರತದ 2ನೇ ಅತಿ ಉದ್ದದ ಕೇಬಲ್ ಸೇತುವೆ ಎಂಬ ಹಿರಿಮೆಗೂ ಪಾತ್ರವಾಗಿದೆ. ಜು.14ರಂದು ಈ ಸೇತುವೆಯನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೇ ಸಂಸದ ಬಿ.ವೈ. ರಾಘವೇಂದ್ರ ಅವರು ಈ ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿಯ ಹೆಸರಿಡಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ನಡುವೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಕೇಳಿ ಬರುತ್ತಿದೆ.
ಶಿವಮೊಗ್ಗದ ವಿಮಾನ ನಿಲ್ದಾಣಕ್ಕೂ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವ ಬೇಡಿಕೆ ಮುನ್ನೆಲೆಗೆ ಬಂದಿತ್ತು. ಆದರೆ ಅಂತಿಮವಾಗಿ ಯಡಿಯೂರಪ್ಪ ಅವರೇ ರಾಷ್ಟ್ರಕವಿ ಕುವೆಂಪು ಹೆಸರನ್ನು ಸೂಚಿಸಿ ಗೊಂದಲಕ್ಕೆ ತೆರೆ ಎಳೆದಿದ್ದರು. ಈಗ ಇಂತದ್ದೇ ಪರಿಸ್ಥಿತಿ ಮತ್ತೆ ಎದುರಾಗಿದ್ದು, ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಕೊಡುಗೆಗಳನ್ನು ನೀಡಿದ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಜಿಲ್ಲೆಯ ವಿಶೇಷ ಸೇತುವೆಗೆ ಇಡುವ ಒತ್ತಾಯ ಕೇಳಿಬರುತ್ತಿದೆ.
ಈ ಸುದ್ದಿಯನ್ನೂ ಓದಿ | Siganduru Bridge: ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಸಿಗಂದೂರಿನಲ್ಲಿ ಜುಲೈ 14ರಂದು ಲೋಕಾರ್ಪಣೆ