Iran–Israel war: ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ
ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಬಳಿಕ ಅವರನ್ನು ತವರಿಗೆ ವಾಪಸ್ ಕರೆ ತರುವ ಸಂಬಂಧ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ -
ಶಿವಮೊಗ್ಗ, ಮಾರ್ಚ್ 01: ರಾಜ್ಯ ಸರ್ಕಾರವು ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ಇಂದು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಅವರು, ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ, ದುಬೈನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.
ಇಸ್ರೇಲ್ - ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ, ಧೈರ್ಯ ತುಂಬಿದ್ದೇನೆ. ಅಧಿಕಾರಿಗಳ ಜತೆ ಚರ್ಚೆ ನಡೆಸಿ ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಬಳಿಕ ಅವರನ್ನು ತವರಿಗೆ ವಾಪಸ್ ಕರೆ ತರುವ ಸಂಬಂಧ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಲಿದೆ ಎಂದು ತಿಳಿಸಿದ್ದಾರೆ.
ಅಮೆರಿಕದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ
ಅಮೆರಿಕ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು.
ಇರಾನ್ ಅಧ್ಯಕ್ಷ ಅಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಇರಾನ್ ಮೇಲೆ ದಾಳಿ ಮಾಡಲು ಅಮೆರಿಕ-ಇಸ್ರೇಲ್ ಶನಿವಾರ ಬೆಳಗ್ಗೆಯೇ ಏಕೆ ಆರಿಸಿಕೊಂಡವು?
ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ
ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಸರ್ಕಾರದ ಮುಂದೆ ಆ ಪ್ರಸ್ತಾಪವಿಲ್ಲ ಎಂದರು.