ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಹಣ ಪಡೆದು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡಿರುವ ಆರೋಪ (KSOU Exam Scam) ಕೇಳಿಬಂದಿದೆ. ಒಂದು ವಿಷಯಕ್ಕೆ 1,000 ರೂ. ಪಡೆದು ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಪುಸ್ತಕ ನೋಡಿ ಪರೀಕ್ಷೆ ಬರೆಯಲು (Mass copying ) ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗದ ಆಲ್ಕೋಳ ವೃತ್ತದ ಸಮೀಪದಲ್ಲಿರುವ ಕೆಎಸ್‌ಒಯು ಪ್ರಾದೇಶಿಕ ಕಚೇರಿಯಲ್ಲಿ ಹಣ ಪಡೆದು ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಪುಸ್ತಕ ಹಾಗೂ ಮೊಬೈಲ್ ಬಳಸಿ ಉತ್ತರ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಅವರ ಕುಮ್ಮಕ್ಕಿನಿಂದಲೇ ಈ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.
ಆರೋಪಗಳ ಪ್ರಕಾರ, ಹಣ ನೀಡಿದ ವಿದ್ಯಾರ್ಥಿಗಳಿಗೆ ಎರಡನೇ ಮಹಡಿಯಲ್ಲಿ ಪುಸ್ತಕ ಮತ್ತು ಮೊಬೈಲ್ ಬಳಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿತ್ತು. ಹಣ ನೀಡದ ವಿದ್ಯಾರ್ಥಿಗಳಿಗೆ ಮೊದಲ ಮಹಡಿಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಪುಸ್ತಕ ಹಾಗೂ ಮೊಬೈಲ್ ನೋಡಿಕೊಂಡು ಉತ್ತರ ಬರೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರತಿದಿನ ಪರೀಕ್ಷೆ ಮುಗಿದ ತಕ್ಷಣ ಸುಮಾರು 70 ರಿಂದ 100 ವಿದ್ಯಾರ್ಥಿಗಳಿಂದ ಸ್ಥಳದಲ್ಲೇ ಹಣ ಪಾವತಿಸಿಕೊಳ್ಳಲಾಗುತ್ತಿದೆ ಎನ್ನಲಾಗಿದೆ.
ಅಕ್ಟೋಬರ್ 7 ರಿಂದ ಆರಂಭವಾಗಿರುವ ಕರ್ನಾಟಕ ಮುಕ್ತ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನವೆಂಬರ್ 20 ರವರೆಗೆ ನಡೆಯಲಿವೆ. ದಿನರಾತ್ರಿ ಕಷ್ಟಪಟ್ಟು ಓದಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪರಿಶ್ರಮವನ್ನು ಈ ಭ್ರಷ್ಟ ಜಾಲ ಮಣ್ಣುಪಾಲು ಮಾಡುತ್ತಿದೆ. ತಕ್ಷಣವೇ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು, ಈ ಕೇಂದ್ರದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಕೇಳಿಬಂದಿದೆ.