ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SSLC Exam: ರಾಜ್ಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ; ಶೇ.33 ಅಂಕ ಪಡೆದರೂ ಪಾಸ್‌

SSLC Exam: ಕನ್ನಡ ಸೇರಿ ಎಸ್‌ಎಸ್ಎಲ್‌ಸಿ ಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ. ಈ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದರೆ, ಮುಂದಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇತರೆ ಐದು ವಿಷಯಗಳಂತೆ ಕನ್ನಡಕ್ಕೂ 100 ಅಂಕ ಇರುತ್ತದೆ.

ರಾಜ್ಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ

Profile Prabhakara R Jul 8, 2025 6:22 PM

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಮಕ್ಕಳು ಇನ್ನುಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ (SSLC Exam) ಬರೆಯಲಿದ್ದಾರೆ. ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ 33 ಅಂಕ ಪಡೆದವರೂ ಉತ್ತೀರ್ಣರಾಗಲಿದ್ದಾರೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ಸಿಬಿಎಸ್‌ಇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆಂತರಿಕ ಅಂಕಗಳೂ ಸೇರಿ ಒಟ್ಟಾರೆ ಶೇ.33 ಅಂಕ ಪಡೆದರೂ ತೇರ್ಗಡೆಯಾಗುತ್ತಾರೆ. ಪ್ರತಿ ವಿಷಯಕ್ಕೂ 80 ಅಂಕಗಳಿಗೆ ಲಿಖಿತ ಪರೀಕ್ಷೆ ಇದ್ದು, 20 ಆಂತರಿಕ ಅಂಕ ಇರುತ್ತದೆ. ಎರಡೂ ಸೇರಿ 100ಕ್ಕೆ ಕನಿಷ್ಠ 33 ಅಂಕ ಪಡೆದವರು ಉತ್ತೀರ್ಣರಾಗುತ್ತಾರೆ. ಇದೇ ಮಾದರಿಯನ್ನು ಎಸ್‌ಎಸ್‌ಎಲ್‌ಸಿಯಲ್ಲೂ ಅಳವಡಿಸಲು ರಾಜ್ಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿ ಪ್ರಥಮ ಭಾಷೆಯನ್ನು 125ಕ್ಕೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ದ್ವಿತೀಯ ಹಾಗೂ ತೃತೀಯ ಭಾಷಾ ವಿಷಯಗಳ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುತ್ತದೆ. ಇದರಲ್ಲಿ ಪ್ರಥಮ ಭಾಷೆ 25 ಹಾಗೂ ಉಳಿದ ಇತರೆ ವಿಷಯಗಳಲ್ಲಿ ತಲಾ 20 ಅಂಕಗಳು ಆಂತರಿಕ ಮೌಲ್ಯಮಾಪನಕ್ಕೆ ನಿಗದಿ ಮಾಡಲಾಗಿದೆ. ಈಗಿರುವ ಎಸ್‌ಎಸ್ಎಲ್‌ಸಿ ಪರೀಕ್ಷಾ ನಿಯಮದ ಪ್ರಕಾರ ಒಬ್ಬ ವಿದ್ಯಾರ್ಥಿ ಉತ್ತೀರ್ಣರಾಗಲು ಶೇ.35 ಅಂಕಗಳನ್ನು ಪಡೆಯಬೇಕು. ಆದರೆ, ಸಿಬಿಎಸ್‌ಇ ಮಾದರಿಯ ಹೊಸ ನಿಯಮ ಜಾರಿಯಾದರೆ ಒಬ್ಬ ವಿದ್ಯಾರ್ಥಿ ಒಂದು ವಿಷಯದಲ್ಲಿ 20 ಅಂತರಿಕ ಅಂಕ ಪಡೆದರೆ, ಲಿಖಿತ ಪರೀಕ್ಷೆಯಲ್ಲಿ 13 ಬಂದರೂ ಸಾಕು ಆ ವಿಷಯದಲ್ಲಿ ತೇರ್ಗಡೆಯಾಗುತ್ತಾನೆ.

ಪ್ರಥಮ ಭಾಷೆ 125ಕ್ಕೆ ಬದಲು 100 ಅಂಕ ನಿಗದಿ

ಕನ್ನಡ ಸೇರಿ ಎಸ್‌ಎಸ್ಎಲ್‌ಸಿ ಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ. 2026ರ ಮಾರ್ಚ್, ಏಪ್ರಿಲ್‌ನಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇತರೆ ಐದು ವಿಷಯಗಳಂತೆ ಕನ್ನಡಕ್ಕೂ 100 ಅಂಕ ಇರುತ್ತದೆ. ಒಟ್ಟಾರೆ ಅಂಕಗಳು 600 ಇರುತ್ತವೆ. ಇದುವರೆಗೂ 625 ಅಂಕಗಳು ಇದ್ದವು. ಪ್ರತಿ ವಿಷಯದಲ್ಲೂ 20 ಅಂಕ ಆಂತರಿಕ ಮೌಲ್ಯಮಾಪನ ಹಾಗೂ 80 ಅಂಕ ಲಿಖಿತ ಪರೀಕ್ಷೆ ಒಳಗೊಂಡಿರುತ್ತದೆ.

ನಿವೃತ್ತ ಪ್ರಾಧ್ಯಾಪಕ ಗಣೇಶ್ ಭಟ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಪರೀಕ್ಷೆ ಸುಧಾರಣಾ ಸಮಿತಿಯು, ಮುಂಬರುವ ಎಸ್‌ಎಸ್ ಎಲ್‌ಸಿ ಪರೀಕ್ಷೆಯಲ್ಲಿ ಒಂದು ಅಂಕದ, ಬಹು ಆಯ್ಕೆಯ ಪ್ರಶ್ನೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಳವಡಿಸಲು, ಪ್ರತಿ ವಿಭಾಗದಲ್ಲೂ ಹೆಚ್ಚು ಪ್ರಶ್ನೆಗಳನ್ನು ನೀಡಿ, ಯಾವುದಾದರೂ ಎರಡು, ಮೂರು, ನಾಲ್ಕು ಪ್ರಶ್ನೆಗಳನ್ನು ಆಯ್ಕೆ ಮಾಡಿಕೊಂಡು ಉತ್ತರ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲು ಸಮಿತಿ ಚರ್ಚೆ ನಡೆಸಿದೆ.

ಈ ಸುದ್ದಿಯನ್ನೂ ಓದಿ | IBPS SO 2025: ರಾಷ್ಟ್ರೀಕೃತ ಬ್ಯಾಂಕ್‌ಗಳ 1,007 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಐಬಿಪಿಎಸ್‌ನಿಂದ ಅರ್ಜಿ ಆಹ್ವಾನ

ಇನ್ನು ಕೋವಿಡ್ ಅವಧಿಯಲ್ಲಿ ಕಲಿಕಾ ನಷ್ಟ ಸರಿದೂಗಿಸಲು ಕೃಪಾಂಕ ನೀಡುವ ಪದ್ಧತಿ ಆರಂಭಿಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂರು ವಿಷಯಗಳಲ್ಲಿ 35 ಅಂಕ ಪಡೆದಿದ್ದು, ಉಳಿದ ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರೆ ಪ್ರತಿ ವಿಷಯದಲ್ಲೂ ಗರಿಷ್ಠ 10 ಕೃಪಾಂಕ ನೀಡಿ ತೇರ್ಗಡೆ ಮಾಡಲಾಗುತ್ತಿತ್ತು. ಮುಂಬರುವ ಪರೀಕ್ಷೆಯಲ್ಲಿ ಸಿಬಿಎಸ್‌ಇ ಮಾದರಿ ಅಳವಡಿಕೆಯಿಂದಾಗಿ ಕೃಪಾಂಕ ಪದ್ಧತಿ ಸಂಪೂರ್ಣ ಸ್ಥಗಿತವಾಗಲಿದೆ ಎಂದು ತಿಳಿದುಬಂದಿದೆ.