ನವದೆಹಲಿ, ನ.13: ಮೇಕೆದಾಟು ಯೋಜನೆಗೆ (Mekedatu Project) ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ (Karnataka) ಪರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳು ನಾಡು (Tamil Nadu) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ.
ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಯೋಜನೆಗೆ ಮುಂದುವರೆಯಲು ಕರ್ನಾಟಕಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ.
ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರಿದ್ದ ಪೀಠ, ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೇಕೆದಾಟು ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ.
ಇದನ್ನೂ ಓದಿ: CM Siddaramaiah: ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ
ಈ ಹಂತದಲ್ಲಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂಗೀಕರಿಸಿದ ಆದೇಶದ ಪ್ರಕಾರ ಮಾಡಲಾಗುತ್ತಿರುವುದು ಕೇವಲ ವಿಸ್ತೃತ ಯೋಜನಾ ವರದಿ ತಯಾರಿಕೆ ಅಷ್ಟೇ ಆಗಿದೆ. ಅದೂ ತಮಿಳುನಾಡಿನ ಆಕ್ಷೇಪಣೆಗಳನ್ನು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ತಜ್ಞರನ್ನು ಪರಿಗಣಿಸಿದ ನಂತರ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಡಿಪಿಆರ್ ಪರಿಗಣಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗಳ ಪೂರ್ವಾನುಮೋದನೆಯು ಪೂರ್ವಾಪೇಕ್ಷಿತವಾಗಿರುತ್ತದೆ ಎಂಬುದನ್ನು ಗಮನಿಸಬೇಕು. ಆ ವಿಷಯದ ದೃಷ್ಟಿಯಿಂದ, ಪ್ರಸ್ತುತ ತಮಿಳುನಾಡಿನ ಅರ್ಜಿಯು ಅಪ್ರಸ್ತುತವಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಪೀಠ ಹೇಳಿದೆ.
ನ್ಯಾಯಾಲಯ ಮತ್ತು ಪ್ರಾಧಿಕಾರಗಳ ನಿರ್ದೇಶನಗಳಿಗೆ ಅನುಸಾರವಾಗಿ ಕರ್ನಾಟಕ ರಾಜ್ಯವು ನೀರನ್ನು ಬಿಡುಗಡೆ ಮಾಡಲು ಬದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ. "ಈ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ಕರ್ನಾಟಕ ವಿಫಲವಾದರೆ, ಅದು ನ್ಯಾಯಾಂಗ ನಿಂದನೆಯ ಅಪಾಯವನ್ನು ಎದುರಿಸುತ್ತದೆ" ಎಂದು ಪೀಠ ಎಚ್ಚರಿಸಿದೆ. ಡಿಪಿಆರ್ ಅನ್ನು ಸಿಡಬ್ಲ್ಯೂಸಿ ಅನುಮೋದಿಸಿದರೆ, ಅದನ್ನು ಕಾನೂನಿನಲ್ಲಿ ಹೇಗೆ ಅನುಮತಿಸಲಾಗಿದೆ ಎಂದು ಪ್ರಶ್ನಿಸಲು ತಮಿಳುನಾಡು ರಾಜ್ಯವು ಅರ್ಜಿ ಸಲ್ಲಿಸಲು ಮುಕ್ತವಾಗಿರುತ್ತದೆ ಎಂದು ನ್ಯಾಯಾಲಯವು ಹೇಳಿದೆ.
ಇದನ್ನೂ ಓದಿ: Mekedatu Project: ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ: ತಮಿಳುನಾಡು