ಹಾಸನ: ಹಾಸನ ದುರಂತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 8 ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಹೇಳಿದ್ದಾರೆ.
ಏನಿದು ಘಟನೆ?
ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಶುಕ್ರವಾರ ರಾತ್ರಿ ಭೀಕರ ದುರಂತ (Hassan Tragedy) ನಡೆದಿದೆ. ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ 8 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಣೇಶ ಮೆರವಣಿಗೆ ವೇಳೆ ನೂರಾರು ಜನ ಡಾನ್ಸ್ ಮಾಡುತ್ತಿದ್ದರು. ಈ ವೇಳೆ ಹೊಳೆನರಸೀಪುರ ಕಡೆ ಹೊರಟಿದ್ದ ಕ್ಯಾಂಟರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಚಾಲಕ ಮೆರವಣಿಗೆ ಮೇಲೆ ವಾಹನ ಹತ್ತಿಸಿದ್ದಾನೆ. ಇದರಿಂದ 8 ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ, ಸೂರಜ್ ರೇವಣ್ಣ ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.