Suspension of BJP MLAs: ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಸ್
Suspension of BJP MLAs: ಮಾರ್ಚ್ 21ರಂದು ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಹಿನ್ನೆಲೆಯಲ್ಲಿ 18 ಬಿಜೆಪಿ ಶಾಸಕರನ್ನು 6 ತಿಂಗಳ ಕಾಲ ಸ್ಪೀಕರ್ ಯು.ಟಿ. ಖಾದರ್ ಅವರು ಅಮಾನತು ಮಾಡಿದ್ದರು. ಇದೀಗ ಸ್ಪೀಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಮಾನತು ಆದೇಶ ಹಿಂಪಡೆಯಲು ನಿರ್ಧರಿಸಲಾಗಿದೆ.


ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು (Suspension of BJP MLAs) ಆದೇಶವನ್ನು ವಾಪಸ್ ಪಡೆಯಲಾಗಿದೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ (Revoking Suspension) ಕೈಗೊಳ್ಳಲಾಗಿದೆ. ಬಿಜೆಪಿ ಶಾಸಕರ ಅಮಾನತು ಸಂಬಂಧ ಚರ್ಚಿಸಲು ವಿಧಾನಸಭೆ ಅಧ್ಯಕ್ಷರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ಮಾರ್ಚ್ 21ರಂದು ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಹಿನ್ನೆಲೆಯಲ್ಲಿ 18 ಬಿಜೆಪಿ ಶಾಸಕರನ್ನು 6 ತಿಂಗಳ ಕಾಲ ಸ್ಪೀಕರ್ ಯು.ಟಿ. ಖಾದರ್ ಅವರು ಅಮಾನತು ಮಾಡಿದ್ದರು.
ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ಸಿ.ಕೆ. ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ. ಅಶ್ವತ್ಥ್ ನಾರಾಯಣ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್.ಆರ್.ವಿಶ್ವನಾಥ್ ಸೇರಿ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿತ್ತು. ಇದೀಗ ಶಾಸಕರ ಅಮಾನತು ಆದೇಶವನ್ನು ವಾಪಸ್ ಪಡೆಯಲಾಗಿದೆ.
ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ನಾತನಾಡಿ, ನಮ್ಮ ಶಾಸಕರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಆರು ತಿಂಗಳು ಅಮಾನತು ಮಾಡಿದ್ದು ಸರಿಯಲ್ಲ. ಹೀಗೆ ಮುಂದುವರಿದರೆ ಸದನದಲ್ಲಿ ಆಡಳಿತ ಪಕ್ಷವೇ ಇರಬೇಕಾಗುತ್ತದೆ. ಸಿಎಂ ಸಹ ಇದು ಇಲ್ಲಿಗೆ ಮುಗಿಯಬೇಕು ಅಂದಿದ್ದಾರೆ. ಸ್ಪೀಕರ್ ಸಹ ನಾಳೆಯಿಂದ ಹಜ್ ಯಾತ್ರೆಗೆ ಹೋಗ್ತಿದ್ದಾರೆ. ಸದನ ಸರಿಯಾಗಿ ನಡೆಯಬೇಕೆಂದು ಸಕಾರಾತ್ಮಕ ಚರ್ಚೆ ಮಾಡಲಾಗಿದೆ. ಇದನ್ನು ಇಲ್ಲಿಗೆ ಅಂತ್ಯ ಮಾಡಬೇಕು ಅಂತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿಎಂ ಸ್ಪೀಕರ್ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮೊದಲು ವಿಧಾನಸೌಧದಲ್ಲಿ ಮಾತನಾಡಿದ್ದ ಸ್ಪೀಕರ್ ಯು.ಟಿ.ಖಾದರ್ ಅವರು, ಬಿಜೆಪಿಯ 18 ಶಾಸಕರ ಅಮಾನತು ಆದೇಶ ಹಿಂಪಡೆಯಲು ಚಿಂತನೆ ನಡೆದಿದೆ ಎಂದು ತಿಳಿಸಿದ್ದರು. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವುದೇ ಪಕ್ಷವಿರಲಿ ಸಂವಿಧಾನ ಪೀಠಕ್ಕೆ ಗೌರವ ನೀಡಬೇಕು. ಪೀಠಕ್ಕೆ ಆಗೌರವ ನೀಡಿದ ಹಿನ್ನೆಲೆಯಲ್ಲಿ ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಅಮಾನತಾದ ಶಾಸಕರೂ ನಮ್ಮವರೇ. ಹಾಗಾಗಿ ಎಲ್ಲರೂ ಸೇರಿ ವಿಚಾರವನ್ನು ಇತ್ಯರ್ಥಗೊಳಿಸುತ್ತೇವೆ ಎಂದು ಹೇಳಿದ್ದರು.
ಈ ಸುದ್ದಿಯನ್ನೂ ಓದಿ | Vidhana Soudha Guided Tour: ವಿಧಾನಸೌಧ ಗೈಡೆಡ್ ಟೂರ್‌ಗೆ ಚಾಲನೆ; ಜೂನ್ 1 ರಿಂದ ಪ್ರವೇಶ, ಶುಲ್ಕ ಎಷ್ಟು?
ಶಾಸಕರು, ಪ್ರತಿಪಕ್ಷದ ನಾಯಕರು ಹಾಗೂ ಬಹಳಷ್ಟು ನಾಯಕರು ಚರ್ಚೆಯ ಸಂದರ್ಭದಲ್ಲಿ ಏನೋ ಹೆಚ್ಚು ಕಮ್ಮಿಯಾಗಿದೆ. ಅಮಾನತು ಆದೇಶವನ್ನು ಹಿಂಪಡೆಯಿರಿ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಆಮಾನತನ್ನು ಹಿಂಪಡೆಯಲು ಆಲೋಚನೆ ನಡೆದಿದ್ದು, ಅದರಂತೆ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಇತರರ ಜತೆ ಇಂದು ಸಂಜೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದರು. ಇದೀಗ ಶಾಸಕರ ಅಮಾನತು ಆದೇಶ ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ.