ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದೆ. ಇದೇ ರೀತಿ ಮುಂದಿನ 4 ದಿನ ರಾಜ್ಯದಲ್ಲಿ ವರುಣ (Karnataka Weather) ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ. ಇನ್ನು ಜುಲೈ 16ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗಲಿದೆ.
ಅದೇ ರೀತಿ ಜುಲೈ 17ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 18ರಂದು ಕೂಡ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್, ಧಾರವಾಡ ಸೇರಿ ಉತ್ತರ ಒಳನಾಡು ಜಿಲ್ಲೆಗಳು ಹಾಗೂ ಬೆಂಗಳೂರು, ರಾಮನಗರ, ಚಾಮರಾಜನಗರ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವ ನಿರೀಕ್ಷೆ ಇದೆ.
ಜುಲೈ 19ರಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆ ಅಬ್ಬರಿಸಲಿದೆ.
ಈ ಸುದ್ದಿಯನ್ನೂ ಓದಿ | Health Tips: ಮಳೆಗಾಲದಲ್ಲಿ ಅಲರ್ಜಿ ನಿಯಂತ್ರಣ ಹೇಗೆ?