ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿನಿಲಯಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ದಿಢೀರ್ ಭೇಟಿ, ಪರಿಶೀಲನೆ
ಸರ್ಕಾರವು ಬಡ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯ ಗಳನ್ನು ಸ್ಥಾಪಿಸಿದೆ. ಇಲ್ಲಿ ಸಿಗುವ ಸೌಲಭ್ಯಗಳನ್ನು ವಿದ್ಯಾರ್ಥಿನಿಯರು ಸದ್ಬಳಕೆ ಮಾಡಿಕೊಂಡು, ಉತ್ತಮ ಫಲಿತಾಂಶದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು


ಚಿಕ್ಕನಾಯಕನಹಳ್ಳಿ: ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ದಿಢೀರ್ ಭೇಟಿ ನೀಡಿ, ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿನಿಯರಿಗೆ ಒದಗಿಸ ಲಾಗುತ್ತಿರುವ ಆಹಾರದ ಗುಣಮಟ್ಟ, ವಸತಿ ವ್ಯವಸ್ಥೆ ಹಾಗೂ ಇತರೆ ಮೂಲಸೌಕರ್ಯಗಳ ಕುರಿತು ಅವರು ವಿವರವಾದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಶಾಸಕರು ವಿದ್ಯಾರ್ಥಿನಿಲಯದ ಅಡುಗೆ ಕೋಣೆ, ಗ್ರಂಥಾಲಯ ಸೇರಿದಂತೆ ವಿವಿಧ ವಿಭಾಗಗಳನ್ನು ವೀಕ್ಷಿಸಿದರು.
ನಂತರ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಅವರು, "ಸರ್ಕಾರವು ಬಡ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯ ಗಳನ್ನು ಸ್ಥಾಪಿಸಿದೆ. ಇಲ್ಲಿ ಸಿಗುವ ಸೌಲಭ್ಯಗಳನ್ನು ವಿದ್ಯಾರ್ಥಿನಿಯರು ಸದ್ಬಳಕೆ ಮಾಡಿಕೊಂಡು, ಉತ್ತಮ ಫಲಿತಾಂಶದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು" ಎಂದು ಕರೆ ನೀಡಿ ದರು. ಸಮಯವನ್ನು ಹಾಳು ಮಾಡದೆ, ಪೋಷಕರ ಕನಸುಗಳನ್ನು ನನಸು ಮಾಡುವತ್ತ ಗಮನ ಹರಿಸುವಂತೆ ಸಲಹೆ ನೀಡಿದರು. ಅಲ್ಲದೆ, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಕಾರಣ, ಹಾಸ್ಟೆಲ್‌ಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: Tumkur (Chikkanayakahalli) News: ಖಾಸಗಿ ಶಾಲೆಗಳಲ್ಲಿ ಪ್ರವೇಶ ಶುಲ್ಕದ ವಿವರ ಪ್ರಕಟಿಸಿ
ತಹಸೀಲ್ದಾರ್ ಪುರಂದರ ಕೆ. ಮಾತನಾಡಿ, "ವಿದ್ಯಾರ್ಥಿನಿಲಯದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ, ಮಕ್ಕಳ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಲಭ್ಯವಿರುವ ವ್ಯವಸ್ಥೆಯನ್ನು ಬಳಸಿ ಕೊಂಡು, ತಮ್ಮ ನಿಲಯವನ್ನು ತಮ್ಮ ಮನೆಯೆಂದೇ ಭಾವಿಸಿ ಸ್ವಚ್ಛವಾಗಿಟ್ಟುಕೊಳ್ಳಬೇಕು" ಎಂದು ಸಲಹೆ ನೀಡಿದರು.
ಈ ಭೇಟಿ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಶಾಸಕರಿಗೆ ಮನವಿ ಸಲ್ಲಿಸಿ, ಉಚಿತ ಸಿಇಟಿ ತರಬೇತಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡುವಂತೆ ಕೋರಿದರು. ವಿದ್ಯಾರ್ಥಿನಿಯರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಜ್ಯೋತಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.