Devarayanadurga Jatre: ಮಾ.6 ರಿಂದ ದೇವರಾಯನದುರ್ಗ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಜಾತ್ರೆ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ
Devarayanadurga Jatre: ದೇವರಾಯನದುರ್ಗ ಗ್ರಾಮದ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಜಾತ್ರೆ ಪೂರ್ವಸಿದ್ಧತಾ ಸಭೆಯಲ್ಲಿ ಡಿಸಿ ಶುಭ ಕಲ್ಯಾಣ್ ಅವರು ಮಾತನಾಡಿದ್ದು, ದೇವರಾಯನದುರ್ಗ ಜಾತ್ರೆ ಅಂಗವಾಗಿ ಮಾ. 13ರಂದು ಜರುಗಲಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವುದರಿಂದ ಸೂಕ್ತ ವ್ಯವಸ್ಥೆ ಕಲ್ಪಸಲು ಸೂಚನೆ ನೀಡಿದ್ದಾರೆ.


ತುಮಕೂರು: ತಾಲೂಕಿನ ದೇವರಾಯನದುರ್ಗ ಗ್ರಾಮದ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಜಾತ್ರೆಯು ಮಾರ್ಚ್ 6 ರಿಂದ 18 ರವರೆಗೆ ಜರುಗಲಿದ್ದು, ಜಾತ್ರಾ ಸಂದರ್ಭದಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿ ಅನನುಕೂಲವಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ದೇವರಾಯನದುರ್ಗ ಜಾತ್ರೆ ಅಂಗವಾಗಿ ಮಾ. 13ರಂದು ಜರುಗಲಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿಯ ಬ್ರಹ್ಮರಥೋತ್ಸವಕ್ಕೆ (Devarayanadurga Jatre) ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವುದರಿಂದ ಸೂಕ್ತ ಪಾರ್ಕಿಂಗ್, ಬಂದೋಬಸ್ತ್, ಬ್ಯಾರಿಕೇಡಿಂಗ್, ಏಕಮುಖ ಸಂಚಾರ ವ್ಯವಸ್ಥೆ ಸೇರಿ ಅಗತ್ಯ ವ್ಯವಸ್ಥೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಜಾತ್ರಾ ದಿನಗಳಂದು ಭಕ್ತರಿಗೆ ಪ್ರಸಾದ ವಿತರಿಸುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬ್ರಹ್ಮ ರಥೋತ್ಸವ ದಿನದಂದು ಸ್ವಾಮಿಯನ್ನು ಹೊತ್ತು ಸಾಗುವ ರಥವನ್ನು ಪರಿಶೀಲಿಸಿ ದೃಢೀಕರಣ ಪತ್ರ ನೀಡಬೇಕೆಂದು ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದರು.
ಜಾತ್ರೆ ಸಂದರ್ಭದಲ್ಲಿ ದೇವರಾಯನದುರ್ಗ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಬಂಟಿಂಗ್ಸ್, ಫ್ಲೆಕ್ಸ್‌ಗಳನ್ನು ಅಳವಡಿಸುವಂತಿಲ್ಲ. ಜಿಲ್ಲಾ ಖಜಾನೆಯಿಂದ ದೇವಾಲಯಕ್ಕೆ ಆಭರಣಗಳನ್ನು ತೆಗೆದುಕೊಂಡು ಬರುವಾಗ ಹಾಗೂ ಹೋಗುವಾಗ ಸೂಕ್ತ ರಕ್ಷಣೆಗಾಗಿ ಗನ್ ಮ್ಯಾನ್ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ತಿಳಿಸಿದರು.
ಜಾತ್ರಾ ಸಮಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕ ಆಸ್ಪತ್ರೆಯನ್ನು ತೆರೆದು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ತುರ್ತು ಚಿಕಿತ್ಸಾ ವಾಹನದೊಂದಿಗೆ ಅಗತ್ಯ ಔಷಧಿ, ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಮಾತನಾಡಿ, ಭಕ್ತಾದಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಬೇಕು. ಬ್ರಹ್ಮರಥೋತ್ಸವ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈ ಸುದ್ದಿಯನ್ನೂ ಓದಿ | Pralhad Joshi: ಹುಬ್ಬಳ್ಳಿ ಜನಕ್ಕೆ ಮುದ ನೀಡಿದ ಧಾರವಾಡ ಸಂಸದರ ಸಾಂಸ್ಕೃತಿಕ, ಕ್ರೀಡಾ ಮಹೋತ್ಸವ
ಸಭೆಯಲ್ಲಿ ದೇವರಾಯನದುರ್ಗ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಕುಮಾರ್ ಎಸ್.ಟಿ., ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮೋಹನ್ ಕುಮಾರ್, ತಹಸೀಲ್ದಾರ್ ಪಿ.ಎಸ್. ರಾಜೇಶ್ವರಿ, ದೇವಾಲಯದ ಅರ್ಚಕರು, ಮತ್ತಿತರರು ಇದ್ದರು.
ಕೆಎಎಸ್ ಪರೀಕ್ಷೆ ಅನ್ಯಾಯ ಸರಿಪಡಿಸುವಂತೆ ಮುಖ್ಯಮಂತ್ರಿಗೆ ಸಿದ್ದಲಿಂಗ ಸ್ವಾಮೀಜಿ ಪತ್ರ
ತುಮಕೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಬರೆದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಅನುವಾದದಲ್ಲಿ ತಜ್ಞರಾದವರು ಹಾಗೂ ಕನ್ನಡ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿದ ತಜ್ಞರ ಸಮಿತಿ ರಚಿಸಿ ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಪಾಡಬೇಕು. ಪ್ರಶ್ನೆಗಳನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ಆಗಿರುವ ತಪ್ಪಿನಿಂದ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದಿರುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗಿದ್ದು, ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವಂತೆ ಕೋರಿದ್ದಾರೆ.
ಪ್ರಶ್ನೆ ಪತ್ರಿಕೆಗಳಲ್ಲಿ ಅನೇಕ ದೋಷಗಳು ಉಂಟಾಗಿವೆ. ಪ್ರಶ್ನೆಗಳು ಅರ್ಥವಾಗದೆ ಅನುತ್ತೀರ್ಣರಾಗಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿ ಮುಂದುವರಿದರೆ ಗ್ರಾಮೀಣ ಮಕ್ಕಳ ಭವಿಷ್ಯ ಹಾಳಾಗಲಿದೆ.ಮುಂದಿನ ದಿನಗಳಲ್ಲಿ ಇಂತಹವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ