ತುಮಕೂರು: ಮಾಜಿ ಸಚಿವ ಬಿ.ಸಿ. ನಾಗೇಶ್ (B.C. Nagesh) ಅವರ ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ಗುರುವಾರ ನೆರವೇರಿತು.
ತಿಪಟೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಪುತ್ರ ವಿಶ್ವದೀಪ್ ಅವರು ಬಿ.ಸಿ.ನಾಗೇಶ್ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಪೊಲೀಸ್ ಇಲಾಖೆಯ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ರಾಷ್ಟ್ರಧ್ವಜ ಗೌರವದೊಂದಿಗೆ ಸಕಲ ಸರ್ಕಾರಿ ಗೌರವ ಸಮರ್ಪಿಸಲಾಯಿತು.
ಅಂತ್ಯಸಂಸ್ಕಾರಕ್ಕೂ ಮುನ್ನ ತಿಪಟೂರಿನ ಕೆ.ಆರ್. ಬಡಾವಣೆಯ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕೇಂದ್ರ ಸಚಿವ ವಿ. ಸೋಮಣ್ಣ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಹಲವು ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.
67 ವರ್ಷದ ಬಿ.ಸಿ ನಾಗೇಶ್ ಅವರು ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದರು. ಎರಡು ಸಲ ಆಪರೇಷನ್ ಕೂಡ ಆಗಿತ್ತು. ಬೆಂಗಳೂರಿನಲ್ಲಿ ಮಗಳ ಮನೆಯಲ್ಲಿದ್ದ ಅವರು ಮಂಗಳವಾರ ಕೊನೆಯುಸಿರೆಳೆದಿದ್ದರು.