Journalists conference: ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡಲು ಕ್ರಮ: ಸಿಎಂ ಸಿದ್ದರಾಮಯ್ಯ
Journalists conference: ತುಮಕೂರು ನಗರದ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ತುಮಕೂರು : ಸರಕಾರದ ವತಿಯಿಂದ ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ (Journalists conference) ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಇನ್ನು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ವಿತರಿಸಲಾಗುವುದು, ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಮಾಧ್ಯಮಗಳು ಮೌಢ್ಯವನ್ನು ಬಿತ್ತರಿಸಬಾರದು, ವಾಸ್ತವತೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು. ನಾನು ಚಾಮರಾಜನಗರಕ್ಕೆ ಭೇಟಿ ನೀಡಿದಾಗ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುತ್ತೇನೆ ಎಂದು ಕೆಲವು ಜ್ಯೋತಿಷಿಗಳು ಹೇಳಿದ್ದರು, ಇಂತಹ ಮೌಢ್ಯ ವಿಚಾರಗಳನ್ನು ಪತ್ರಿಕೆಗಳು ಪ್ರಚಾರ ಮಾಡಬಾರದು ಎಂದರು.
ಜನರು ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಢ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ. ನಾನು ಪ್ರತಿದಿನ ಪತ್ರಿಕೆಗಳನ್ನು ಓದುತ್ತೇನೆ. ಪತ್ರಿಕಾ ಸ್ವಾತಂತ್ರ್ಯವನ್ನು ಗೌರವಿಸುತ್ತೇನೆ. ಸರ್ಕಾರದ ವಿರುದ್ಧ ನನ್ನ ವಿರುದ್ಧ ಪತ್ರಿಕೆಗಳು ಬರೆದರೂ ನಾನು ಗೌರವ ನೀಡುವ ಮೂಲಕ ಮಾಧ್ಯಮ ಧರ್ಮವನ್ನು ಎತ್ತಿ ಹಿಡಿಯುತ್ತೇನೆ ಎಂದು ತಿಳಿಸಿದರು.
ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದರು.
ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.
ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ , ಸವಾಲು ಎರಡೂ ಆಗಿದೆ.ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ ಎಂದರು.
ಈ ಸುದ್ದಿಯನ್ನೂ ಓದಿ | Bengaluru News: ಇವಿ ಬಳಕೆ ಉತ್ತೇಜನಕ್ಕೆ ಮೂಲಸೌಕರ್ಯ ಕಲ್ಪಿಸುವಲ್ಲಿ ಕರ್ನಾಟಕ ಮಾದರಿ: ಕೆ.ಜೆ.ಜಾರ್ಜ್
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಸಚಿವ ಸೊಗಡು ಶಿವಣ್ಣ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು, ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.