ತುಮಕೂರು: ಇಸ್ಪೀಟ್ ಆಡುತ್ತಿದ್ದ ಆರೋಪದ ಮೇರೆಗೆ ವಶಕ್ಕೆ ಪಡೆದಿದ್ದ ವ್ಯಕ್ತಿ ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದ್ದು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕುಟುಂಬಸ್ಥರು, ಗ್ರಾಮಸ್ಥರು, ಸಾರ್ವಜನಿಕರು ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿ ತನಿಖೆಗೆ ಆಗ್ರಹಿಸಿದ್ದಾರೆ.
ಈ ಸಂಬಂಧ ಗ್ರಾಮಸ್ಥರು ಹುಳಿಯಾರು ಪೊಲೀಸ್ ಠಾಣೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ತೀವ್ರ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಮಾಜಿ ಸಚಿವ ಮಾಧುಸ್ವಾಮಿ, ಮಾಜಿ ಶಾಸಕ ಕಿರಣ್ ಕುಮಾರ್ ಠಾಣೆಗೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಯಳನಾಡು ಗ್ರಾಮದ ಕಾಂತರಾಜು(45) ಪೊಲೀಸ್ ವಶದಲ್ಲಿದ್ದಾಗಲೇ ಮೃತಪಟ್ಟ ವ್ಯಕ್ತಿ.
ಯಳನಾಡು ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಹುಳಿಯಾರು ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಕಾಂತರಾಜು (45) ಸೇರಿದಂತೆ ಆರು ಜನರನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಗೆ ಕರೆತಂದಿದ್ದರು. ಆದರೆ, ಠಾಣೆಗೆ ಬಂದ ಕೆಲವೇ ಸಮಯದಲ್ಲಿ ಕಾಂತರಾಜು ಮೃತಪಟ್ಟಿದ್ದಾರೆ. ಪೊಲೀಸರು ಕುಡಿಯಲು ನೀರು ಕೊಡದೆ, ಹೆದರಿಸಿ ಭಯ ಮೂಡಿಸಿರುವುದರಿಂದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರ ಮತ್ತು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ ಸಾವಿಗೆ ಕಾರಣವಾಗಿರುವ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಇದನ್ನೂ ಓದಿ: Tumkur news: ಪೊಲೀಸರ ವಶದಲ್ಲಿದ್ದಾಗ ವ್ಯಕ್ತಿಯ ಸಾವು, ಕೆರಳಿದ ಗ್ರಾಮಸ್ಥರಿಂದ ಪ್ರತಿಭಟನೆ
ಠಾಣೆಗೆ ಬೀಗ ಜಡಿದು ಆಕ್ರೋಶ
ಕಾಂತರಾಜು ಅವರು ಪೊಲೀಸರ ದೌರ್ಜನ್ಯದಿಂದಲೇ ಮೃತಪಟ್ಟಿದ್ದಾರೆಂದು ಆರೋಪಿಸಿ ನೂರಾರು ಗ್ರಾಮಸ್ಥರು, ಹುಳಿಯಾರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬೀಗ ಜಡಿದು ಮೃತದೇಹವನ್ನು ಠಾಣೆಯ ಒಳಗೇ ಇಟ್ಟುಕೊಂಡು, ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದರು. ಠಾಣೆಯ ಆವರಣದಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದಂತೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಯಿತು.
ಹೃದಯಾಘಾತದಿಂದ ಸಾವು?
ಪ್ರಾಥಮಿಕ ಮಾಹಿತಿಯ ಪ್ರಕಾರ, ಠಾಣೆಗೆ ಕರೆ ತಂದ ಬಳಿಕ ಕಾಂತರಾಜು ಅವರಿಗೆ ಪೊಲೀಸರ ಭಯದಿಂದಾಗಿ ತೀವ್ರ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ಸ್ಥಳಕ್ಕೆ ಎಸ್ಪಿ ಅಶೋಕ್ ಭೇಟಿ
ವಿಷಯ ತಿಳಿಯುತ್ತಿದ್ದಂತೆಯೇ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಹುಳಿಯಾರು ಠಾಣೆಗೆ ಭೇಟಿ ನೀಡಿದರು. ಆಕ್ರೋಶಗೊಂಡಿದ್ದ ಗ್ರಾಮಸ್ಥರು ಮತ್ತು ಮೃತನ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ, 'ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗು ವುದು. ಒಂದು ವೇಳೆ ಪೊಲೀಸರ ತಪ್ಪು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನೆ ಅಂತ್ಯ; ಶವ ಪರೀಕ್ಷೆಗೆ ರವಾನೆ
ಎಸ್ಪಿ ಅವರ ಭರವಸೆಯ ನಂತರ ಗ್ರಾಮಸ್ಥರು ಪ್ರತಿಭಟನೆಯನ್ನು ಕೈಬಿಟ್ಟರು. ಬಳಿಕ ಮೃತದೇಹವನ್ನು ಠಾಣೆಯಿಂದ ಹೊರ ತೆಗೆದು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.