ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA H.V. Venkatesh: ವಳ್ಳೂರಿನಲ್ಲಿ ಪ್ರಜಾ ಸೇವಾ ಅಭಿಯಾನ: ಜನರ ಸಮಸ್ಯೆ ಆಲಿಸಿದ ಶಾಸಕ ಎಚ್.ವಿ. ವೆಂಕಟೇಶ್

ಸಾರ್ವಜನಿಕರು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ(Praja Seva) ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಶಾಸಕ ಎಚ್.ವಿ. ವೆಂಕಟೇಶ್(MLA H V Venkatesh) ತಿಳಿಸಿದರು.

ಪಾವಗಡ: ಸಾರ್ವಜನಿಕರು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ(Praja Seva) ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಶಾಸಕ ಎಚ್.ವಿ. ವೆಂಕಟೇಶ್(MLA H V Venkatesh) ತಿಳಿಸಿದರು.

ತಾಲೂಕಿನ ನಾಗಲಮಡಿಕೆ ಹೋಬಳಿಯ ವಳ್ಳೂರು ಗ್ರಾಮದಲ್ಲಿ ಶನಿವಾರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಪ್ರಜಾ ಸೇವಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ಪಿಂಚಣಿ, ವಿಧವಾ ವೇತನ, ವೃದ್ಧಾಪ್ಯ ವೇತನ, ಪಡಿತರ ಚೀಟಿ, ಖಾತೆ, ಪಹಣಿ, ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ನಿಗದಿತ ಸಮಯದಲ್ಲಿ ಪರಿಹಾರ ಕಲ್ಪಿಸಲಿದ್ದಾರೆ. ಸಣ್ಣಪುಟ್ಟ ಕೆಲಸಗಳಿಗಾಗಿ ಸಾರ್ವಜನಿಕರು 30ರಿಂದ 40 ಕಿ.ಮೀ. ದೂರದ ತಾಲೂಕು ಕೇಂದ್ರಕ್ಕೆ ಅಲೆದಾಡಿ ಹಣ ಮತ್ತು ಸಮಯ ವ್ಯರ್ಥ ಮಾಡಬಾರದು ಎಂಬ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಅಧಿಕಾರಿಗಳು ಸೇವೆ ಒದಗಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: Pavagada News: ಖೋ ಖೋ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಲಿಂಗದಹಳ್ಳಿ ಶಾಲೆಯ ಬಾಲಕಿಯರ ತಂಡ ಆಯ್ಕೆ

ವಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗು ತ್ತಿದೆ. ಈಗಾಗಲೇ ವಳ್ಳೂರು ಗ್ರಾಮದಲ್ಲಿ 460 ಮೀಟರ್ ಸಿಸಿ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ 2.2 ಕಿ.ಮೀ. ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಪ್ರತಿ ಗ್ರಾಮ ದಲ್ಲಿಯೂ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿ ಮಣ್ಣಿನ ರಸ್ತೆಗಳೇ ಇಲ್ಲದಂತೆ ಮಾಡುವ ಗುರಿ ಹೊಂದಿದ್ದೇನೆ. ವಿವಿಧ ಗ್ರಾಮಗಳಲ್ಲಿ ಒಂದು ವಾರದೊಳಗೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ವಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿಗಾಗಿ ವಳ್ಳೂರಿನಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ 30 ಲಕ್ಷ ರೂ., ಇಂಟೂರಾಯನಹಳ್ಳಿಗೆ 15 ಲಕ್ಷ ರೂ., ಬಳಸಮುದ್ರಕ್ಕೆ 15 ಲಕ್ಷ ರೂ. ಹಾಗೂ ವೆಂಕಟಮ್ಮನಹಳ್ಳಿಗೆ 25 ಲಕ್ಷ ರೂ. ಅನುದಾನ ಮೀಸಲಿಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂ. ಅಭಿವೃದ್ಧಿ ಅನುದಾನ ನೀಡುವ ಕುರಿತು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

Pavagada 2

ಇದಲ್ಲದೆ, ವೆಂಕಟಮ್ಮನಹಳ್ಳಿಯ ಪೆದ್ದಮ್ಮ ದೇವಸ್ಥಾನ ಅಭಿವೃದ್ಧಿಗೆ 20 ಲಕ್ಷ ರೂ., ಮಸೀದಿ ಅಭಿವೃದ್ಧಿಗೆ 10 ಲಕ್ಷ ರೂ., ಇಂಟೂರುಹಳ್ಳಿಯ ಅಂಜನೇಯ ಸ್ವಾಮಿ ದೇವಸ್ಥಾನಕ್ಕೆ 10 ಲಕ್ಷ ರೂ. ಹಾಗೂ ವಳ್ಳೂರಿನ ದೊಡ್ಡಮ್ಮ ದೇವಸ್ಥಾನಕ್ಕೆ 5 ಲಕ್ಷ ರೂ. ಅನುದಾನ ಮಂಜೂರಾಗಿದೆ. ಪಿಡಬ್ಲ್ಯೂಡಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮೂಲಕವೂ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಲಾಗುತ್ತಿದೆ ಎಂದು ಹೇಳಿದರು.

ನಾಗಲಮಡಿಕೆ ದೇವಸ್ಥಾನಕ್ಕೆ 30 ಕೋಟಿ ರೂ. ಅಭಿವೃದ್ಧಿ ಯೋಜನೆ

ನಾಗಲಮಡಿಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನವನ್ನು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಗಳ ಮಾದರಿಯಲ್ಲಿ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸುವುದು ನನ್ನ ಕನಸಿನ ಯೋಜನೆಯಾಗಿದೆ ಎಂದು ಶಾಸಕರು ತಿಳಿಸಿದರು.

ದೇವಸ್ಥಾನದ ಅಭಿವೃದ್ಧಿಗೆ ಸುಮಾರು 30 ಕೋಟಿ ರೂ. ವೆಚ್ಚದ ಯೋಜನಾ ರೂಪುರೇಷೆ ಸಿದ್ಧಪಡಿಸಲಾಗಿದೆ. ದಾನಿಗಳು ಸುಮಾರು 20 ಕೋಟಿ ರೂ. ನೆರವು ನೀಡಲು ಸಿದ್ಧರಿದ್ದು, ದೇವಸ್ಥಾನದ ನಿರ್ಮಾಣಕ್ಕೆ ಅಗತ್ಯವಾದ ಗ್ರಾನೈಟ್ ಒದಗಿಸುವುದಾಗಿಯೂ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಉದ್ದೇಶವಿದೆ ಎಂದರು.

ಪಾವಗಡ ಭಾಗದಲ್ಲಿ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಉತ್ತೇಜನ ನೀಡಲಾಗು ತ್ತಿದ್ದು, ಗಾಳಿಯಂತ್ರಗಳ ಸ್ಥಾಪನೆಗೆ ಸಂಬಂಧಿಸಿದಂತೆ 94 ವಿಂಡ್‌ಮಿಲ್‌(Wind Mill)ಗಳಿಗೆ ಅನುಮೋದನೆ ದೊರೆತಿದೆ. ಈಗಾಗಲೇ ಕೆಲವು ಯಂತ್ರಗಳ ಸ್ಥಾಪನೆ ಕಾರ್ಯ ಆರಂಭವಾಗಿದ್ದು, ಇದರಿಂದ ಸ್ಥಳೀಯ ರೈತರಿಗೆ ಆರ್ಥಿಕ ಅನುಕೂಲವಾಗುವ ನಿರೀಕ್ಷೆಯಿದೆ ಎಂದರು.

ಪಾವಗಡ ಬೈಪಾಸ್ ರಸ್ತೆ ನಿರ್ಮಾಣಕ್ಕೂ ಮಂಜೂರಾತಿ ದೊರೆತಿದ್ದು, ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿದೆ. ತುಂಗಭದ್ರಾ ಕುಡಿಯುವ ನೀರಿನ ಯೋಜನೆಯಿಂದ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಯಾಗಿದೆ. ಕೆಲವು ಗ್ರಾಮಗಳಲ್ಲಿ ನೀರಿನ ಒತ್ತಡದ ಸಮಸ್ಯೆಗಳಿದ್ದು, ಅವುಗಳನ್ನು ಪರಿಶೀಲಿಸಿ ಪರಿಹರಿಸಲಾಗುವುದು ಎಂದರು.

Pavagada 14

ಆರಚಮ್ಮನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಸ್ಮಶಾನಕ್ಕೆ ಜಾಗದ ಬೇಡಿಕೆ ಕುರಿತು ಅಧಿಕಾರಿಗಳ ಗಮನ ಸೆಳೆದ ಅವರು, ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಸ್ಮಶಾನಕ್ಕೆ ಜಾಗ ಖರೀದಿಸಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕು ಎಂದು ಸೂಚಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಿ; ಎಲ್ಲ ವರ್ಗದವರಿಗೂ ಅವಕಾಶ

ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿದ್ದು, ಚುನಾವಣೆಗೆ ಮುಖಂಡರು ಮತ್ತು ಕಾರ್ಯಕರ್ತರು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ವಿ. ವೆಂಕಟೇಶ್ ಕರೆ ನೀಡಿದರು.

ಚುನಾವಣೆಯಲ್ಲಿ ಎಲ್ಲಾ ಜಾತಿ, ಸಮುದಾಯ ಹಾಗೂ ವರ್ಗಗಳಿಗೂ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಸಹಕಾರ ನೀಡಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸಲಾಗುವುದು. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗು ವುದು ಎಂದರು.

ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ವಿಚಾರವನ್ನು ಪ್ರಸ್ತಾಪಿಸಿದ ಅವರು, ಕ್ಷೇತ್ರ ಪುನರ್‌ವಿಂಗಡಣೆ ನಂತರ ರಾಜಕೀಯ ಪ್ರಾತಿನಿಧ್ಯದಲ್ಲಿ ಬದಲಾವಣೆಗಳಾಗುವ ಸಾಧ್ಯತೆಯಿದ್ದು, ಮಹಿಳೆಯರು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು. ಶಾಸಕನಾಗಿ ಮುಂದುವರಿದರೂ ಅಥವಾ ಬೇರೆ ಜವಾಬ್ದಾರಿಗಳಲ್ಲಿದ್ದರೂ ಜನರ ಸೇವೆ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವುದಾಗಿ ತಿಳಿಸಿದರು.

ತಹಶೀಲ್ದಾರ್ ಡಿ.ಎನ್. ವರದರಾಜು ಮಾತನಾಡಿ, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ತಾಲೂಕು ಕೇಂದ್ರಕ್ಕೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಆಗಮಿಸಿದ್ದಾರೆ. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಹುದು. ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಿರುವ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡಲಾಗುವುದು. ಉಳಿದ ಅರ್ಜಿಗಳನ್ನು ಪರಿಶೀಲಿಸಿ ಒಂದು ವಾರದೊಳಗೆ ಅಥವಾ ನಿಗದಿತ ಅವಧಿಯಲ್ಲಿ ಪರಿಹರಿಸಿ, ಅರ್ಜಿದಾರರಿಗೆ ಮಾಹಿತಿ ಹಾಗೂ ಹಿಂಬರಹ ನೀಡಲಾಗುವುದು ಎಂದರು.

ಪಿಂಚಣಿ ಹಣ ಜಮೆಯಾಗದಿದ್ದರೆ ಗ್ರಾಮ ಲೆಕ್ಕಾಧಿಕಾರಿ ಅಥವಾ ಕಂದಾಯ ಅಧಿಕಾರಿಗಳನ್ನು ಸಂಪರ್ಕಿಸಬಹುದು. ರೇಷನ್ ಕಾರ್ಡ್‌ಗೆ ಸಂಬಂಧಿಸಿದ ಬಹುತೇಕ ಅರ್ಜಿಗಳನ್ನು ಪರಿಶೀಲಿಸಿ ಪೂರ್ಣಗೊಳಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಬಾಕಿ ಉಳಿದಿರುವ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಾಗಿದ್ದು, ಕಾನೂನುಬದ್ಧವಾಗಿ ಅರ್ಹತೆ ಹೊಂದಿರುವವರಿಗೆ ನಿಯಮಾನು ಸಾರ ಪಡಿತರ ಚೀಟಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಧುಸೂಧನ್ ಮಾತನಾಡಿ, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಿ, ವಿವಿಧ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾ ಸೇವಾ ಅಭಿಯಾನ ಜಾರಿಗೊಳಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಿ ಪಿಂಚಣಿ, ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಸೌಲಭ್ಯಗಳ ಮಾಹಿತಿಯನ್ನು ಸಂಗ್ರಹಿಸಿ ನಿಗದಿತ ನಮೂನೆಯಲ್ಲಿ ದಾಖಲಿಸಲಾಗುತ್ತಿದೆ ಎಂದರು.

ಅರ್ಜಿಗಳ ಸ್ಥಿತಿಗತಿ ತಿಳಿಯಲು ಮೊಬೈಲ್ ಸಂದೇಶ ಹಾಗೂ ಒಟಿಪಿ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಬುಧವಾರ ಸಭೆ ನಡೆಸಿ ಸ್ವೀಕರಿಸಿದ ಅರ್ಜಿಗಳ ಪ್ರಗತಿ ಪರಿಶೀಲಿಸ ಲಾಗುತ್ತಿದೆ. ಯಾವುದೇ ಅರ್ಹ ಫಲಾನುಭವಿಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಬಕಾರಿ ನಿರೀಕ್ಷಕ ಮೈಕಲ್ ಜಾರ್ಜ್, ಕುಡಿಯುವ ನೀರು ವಿಭಾಗದ ಇಂಜಿನಿಯರ್ ಬಸವಲಿಂಗಪ್ಪ, ಎಇಇ ಚೇತನ್, ತಾಲೂಕು ಆರೋಗ್ಯ ವೈದ್ಯಾಧಿಕಾರಿ ನಾಗೇಶ್ ನಾಯ್ಕ್, ಪಶುಪಾಲನಾ ಇಲಾಖೆಯ ಹೊರಕೇರಪ್ಪ, ಕೃಷಿ ಇಲಾಖೆಯ ಅಜಯ್, ತೋಟಗಾರಿಕಾ ಇಲಾಖೆಯ ಗೀತಮ್ಮ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ದಿನೇಶ್, ಸಿಡಿಪಿಒ ಸುನಿತಾ, ಆಹಾರ ಶಿರಸ್ತೇದಾರ್ ಶಶಿಕಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.