ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತುಮಕೂರು ವಿವಿ ಆವರಣದಲ್ಲಿ ಹೆಲಿರೈಡ್‌ ವಿರೋಧಿಸಿ ಪ್ರತಿಭಟನೆ: ಹೆಲಿಕಾಪ್ಟರ್‌ಗೆ ಮುತ್ತಿಗೆ ಯತ್ನ

ದಸರಾ ಮಹೋತ್ಸವದ ಅಂಗವಾಗಿ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಹೆಲಿರೈಡ್‌ ಆಯೋಜಿಸಲಾಗಿದೆ. ಆದರೆ, ಹೆಲಿಕಾಪ್ಟರ್ ಹಾರಾಟದಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಇದನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ತುಮಕೂರು ವಿವಿಧ ವಿದ್ಯಾರ್ಥಿಗಳು ಹೆಲಿಕಾಪ್ಟರ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

​ತುಮಕೂರು ವಿವಿ ಆವರಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.

​ತುಮಕೂರು: ದಸರಾ ಮಹೋತ್ಸವದ ಅಂಗವಾಗಿ ತುಮಕೂರು ವಿಶ್ವವಿದ್ಯಾಲಯದ (Tumkur University) ಆವರಣದಲ್ಲಿ ಆಯೋಜಿಸಿರುವ ‘ಹೆಲಿರೈಡ್’ (heliride) ಕಾರ್ಯಕ್ರಮವನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ತೀವ್ರ ಪ್ರತಿಭಟನೆ ನಡೆಸಿದರು.

ಹೆಲಿಕಾಪ್ಟರ್ ಹಾರಾಟದಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಇದನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಹೆಲಿಕಾಪ್ಟರ್‌ಗೆ ಮುತ್ತಿಗೆ ಹಾಕಲು ಯತ್ನಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

​ತುಮಕೂರು ದಸರಾ ಉತ್ಸವದ ನಿಮಿತ್ತ ಜಿಲ್ಲಾಡಳಿತವು ವಿವಿ ಆವರಣದಲ್ಲಿ ಹೆಲಿರೈಡ್ ಆಯೋಜಿಸಿದೆ. ಆದರೆ, ಸತತ 12 ದಿನಗಳ ಕಾಲ ಪ್ರತಿ 10 ನಿಮಿಷಕ್ಕೊಮ್ಮೆ ಹೆಲಿಕಾಪ್ಟರ್ ಹಾರಾಟ ನಡೆಸುವುದರಿಂದ ಕರ್ಕಶ ಶಬ್ದ ಉಂಟಾಗಿ ತರಗತಿಗಳಲ್ಲಿ ಪಾಠ ಕೇಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಹೆಲಿಕಾಪ್ಟರ್‌ನಿಂದ ಉಂಟಾಗುವ ಧೂಳು ತರಗತಿ ಕೊಠಡಿಗಳ ಒಳಗೆ ಸೇರುತ್ತಿದ್ದು ವಿದ್ಯಾರ್ಥಿಗಳಿಗೆ ತೀವ್ರ ಅನಾನುಕೂಲವಾಗುತ್ತಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

​ಜಿಲ್ಲಾಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ:

​ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸದಿರುವುದಕ್ಕೆ ಎಬಿವಿಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಹಿತಾಸಕ್ತಿ ಕಡೆಗಣಿಸಿ ಮನರಂಜನಾ ಕಾರ್ಯಕ್ರಮಕ್ಕೆ ಮಣೆ ಹಾಕುತ್ತಿರುವ ಜಿಲ್ಲಾಡಳಿತದ ಧೋರಣೆ ಸರಿಯಲ್ಲ ಎಂದು ಖಂಡಿಸಿದರು.

​ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಎಬಿವಿಪಿ ಜಿಲ್ಲಾ ಸಂಚಾಲಕ ಎಚ್.ಆರ್. ಗುರುಪ್ರಸಾದ್, "ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಮೀಸಲಾದ ಸ್ಥಳ. ಇಲ್ಲಿ ನಿರಂತರ ಹೆಲಿಕಾಪ್ಟರ್ ಹಾರಾಟದಿಂದ ಕಲಿಕೆಗೆ ಅಡ್ಡಿಯಾಗುತ್ತಿದ್ದು, ಕೂಡಲೇ ಹೆಲಿರೈಡ್ ಅನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು. ಸಮಸ್ಯೆ ಬಗೆಹರಿಯುವವರೆಗೂ ಹೋರಾಟ ಮುಂದುವರಿಯಲಿದೆ" ಎಂದು ಎಚ್ಚರಿಸಿದರು.

​ರಾಜ್ಯ ಕಾರ್ಯದರ್ಶಿ ಗೋಪಿ ಮಾತನಾಡಿ, ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

​ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಅವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಸಮಾಧಾನಪಡಿಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

​ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಸಮನ್ವಿತ್, ಜಿಲ್ಲಾ ಸಂಚಾಲಕರಾದ ಸಿದ್ದರಾಮಯ್ಯ, ಮಧುಗಿರಿ ಜಿಲ್ಲಾ ಸಂಚಾಲಕ ಲೋಕೇಶ್, ವಿದ್ಯಾರ್ಥಿನಿ ಪ್ರಮುಖ ಯಮುನಾ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.