ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಟೀಕಿಸುವವರು ಮೊದಲು ತಮ್ಮ ರಾಜಕೀಯ ಸಾಧನೆ ಏನೆಂಬುದು ಆತ್ಮಾವಲೋಕನ ಮಾಡಿಕೊಳ್ಳಲಿ: ಶಾಸಕ ಎಚ್.ವಿ. ವೆಂಕಟೇಶ್

Pavagada News: ಪಾವಗಡ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ಠಾಣೆ, ಪೊಲೀಸ್ ವಸತಿ ಗೃಹ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ (ಐಟಿಐ) ನೂತನ ಕಟ್ಟಡ ಉದ್ಘಾಟನೆ ಮತ್ತು ಬಳಸಿದ ನೀರು ಶುದ್ಧೀಕರಣ ಘಟಕದ ನಿರ್ಮಾಣಕ್ಕೆ ಶಾಸಕ ಎಚ್.ವಿ. ವೆಂಕಟೇಶ್ ಶಂಕುಸ್ಥಾಪನೆ ನೆರವೇರಿಸಿದರು.

ಪಾವಗಡ‌, ನ,21: ನಮ್ಮ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜೆಡಿಎಸ್ ನಾಯಕರಿಗೆ ಸಹಿಸಲಾಗುತ್ತಿಲ್ಲ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ಮೂಲಕ ವಿರೋಧ ಪಕ್ಷಗಳ ಉಳಿದಿರುವ ರಾಜಕೀಯ ಶಕ್ತಿಯನ್ನೂ ಕುಗ್ಗಿಸುತ್ತೇವೆ ಎಂದು ಶಾಸಕ ಎಚ್.ವಿ. ವೆಂಕಟೇಶ್, ವಿಪಕ್ಷ ನಾಯಕರಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದರು.

ಪಾವಗಡ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ಠಾಣೆ, ಪೊಲೀಸ್ ವಸತಿ ಗೃಹ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ (ಐಟಿಐ) ನೂತನ ಕಟ್ಟಡ ಉದ್ಘಾಟನೆ ಮತ್ತು ಬಳಸಿದ ನೀರು ಶುದ್ಧೀಕರಣ ಘಟಕದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ತಾಲೂಕು ಕಚೇರಿಯಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಬಿಜೆಪಿ ಪಕ್ಷದ ಅಸ್ತಿತ್ವವೇ ಇಲ್ಲದಂತಾಗಿದೆ. ಇನ್ನು ಜೆಡಿಎಸ್ ಪಕ್ಷ ಎರಡು ಹೋಳಾಗಿದೆ. ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಜೆಡಿಎಸ್ ನಾಯಕರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಟೀಕೆ ಮಾಡುವವರು ಮೊದಲು ತಮ್ಮ ರಾಜಕೀಯ ಸಾಧನೆ ಏನೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.

ಹಿಂದಿನ ಶಾಸಕರಾದ ದಿವಂಗತ ವೆಂಕಟರಮಣಪ್ಪ ಅವರು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಇಂದಿಗೂ ಜನರ ಕಣ್ಣಮುಂದಿವೆ. ಅದೇ ರೀತಿ ಕಳೆದ ಮೂರು ವರ್ಷಗಳಲ್ಲಿ ನಮ್ಮ ಸರ್ಕಾರ ಹಾಗೂ ನನ್ನ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳೇ ಆಡಳಿತಕ್ಕೆ ಸಾಕ್ಷಿಯಾಗಿವೆ. ಪ್ರತಿನಿತ್ಯ ಮಾಧ್ಯಮಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳ ಮಾಹಿತಿ ಪ್ರಕಟವಾಗುತ್ತಿದೆ ಎಂದರು.

16 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ತಾವೇ ಕಾರ್ಯಕ್ರಮಗಳನ್ನು ನೆರವೇರಿಸಿರುವುದಾಗಿ ತಿಳಿಸಿದರು. ಸುಮಾರು 16 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಐಟಿಐ ಕಾಲೇಜಿಗೆ ಮುಂದಿನ ದಿನಗಳಲ್ಲಿ ಕಾಂಪೌಂಡ್ ಸೇರಿದಂತೆ ಹೆಚ್ಚುವರಿ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ಸುದೇಶ್ ಬಾಬು, ಶಂಕರ್ ರೆಡ್ಡಿ, ಪಿ.ಎಚ್. ರಾಜೇಶ್, ಕಾಂಪೋಸ್ಟ್ ಅಭಿವೃದ್ಧಿ ನಿಗಮ ಮಂಡಳಿ ನಾಮನಿರ್ದೇಶಿತ ನಿರ್ದೇಶಕ ಕಲ್ಪವೃಕ್ಷ ರವಿ, ರಾಮಾಂಜಿನಪ್ಪ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಶೇಷಗಿರಿ, ಬತ್ತಿನೇನಿ ನಾಗೇಂದ್ರರಾವ್, ಆರ್.ಎ. ಹನುಮಂತರಾಯಪ್ಪ, ತಹಶೀಲ್ದಾರ್ ವರದರಾಜು, ಇಒ ಮಧುಸೂಧನ್, ಕೈಗಾರಿಕಾ ತರಬೇತಿ ಇಲಾಖೆಯ ಜಂಟಿ ನಿರ್ದೇಶಕ ಜಾದನೂರು, ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್, ಲೋಕೋಪಯೋಗಿ ಇಲಾಖೆಯ ಅಭಿಯಂತರ ಚೇತನ್, ಗುತ್ತಿಗೆದಾರ ಪವನ್ ಕುಮಾರ್ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.