ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕನಿಷ್ಠ ವೇತನ, ಸೇವಾ ಭದ್ರತೆಗೆ ಆಗ್ರಹ; ತುಮಕೂರಿನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

Tumkur News: ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಕನಿಷ್ಠ ವೇತನ ಜಾರಿಗೊಳಿಸಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸೇವಾ ಭದ್ರತೆಗೆ ಆಗ್ರಹಿಸಿ ತುಮಕೂರಿನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕನಿಷ್ಠ ವೇತನ, ಸೇವಾ ಭದ್ರತೆಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ ಹೊರಗುತ್ತಿಗೆ ನೌಕರರು. -

Profile
Siddalinga Swamy Aug 18, 2026 6:44 PM

ತುಮಕೂರು, ಆ.18: ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಕನಿಷ್ಠ ವೇತನ ಜಾರಿಗೊಳಿಸಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ (Tumkur News) ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಗರದ ಟೌನ್ ಹಾಲ್‌ನಿಂದ ಪ್ರತಿಭಟನಾ ಮೆರವಣಿಗೆ ಮೂಲಕ ನೌಕರರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸೇವಾ ಖಾಯಮಾತಿಗೆ ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವೆಇಗೆ ಮನವಿ ಸಲ್ಲಿಸಿದ್ದಾರೆ.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ 15-20 ವರ್ಷಗಳಿಂದ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ ಹಾಗೂ ಹೊರಗುತ್ತಿಗೆ ಅತಿಥಿ ಶಿಕ್ಷಕರು ಕಡಿಮೆ ಸಂಬಳಕ್ಕೆ ಯಾವುದೇ ಜೀವನ ಭದ್ರತೆಯಿಲ್ಲದೆ ದುಡಿಯುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ವೇತನ ಹೆಚ್ಚಳ ಬೇಡಿಕೆ

ಮೇಯಲ್ಲಿ ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ವೇತನ ಪರಿಷ್ಕರಣೆ ಕುರಿತು ಕರಡು ಅಂತಿಮ ಅಧಿಸೂಚನೆ ಹೊರಡಿಸಿದ್ದು, ವಿಳಂಬ ಮಾಡದೆ ತಿಂಗಳಿಗೆ ಕನಿಷ್ಠ 36 ಸಾವಿರ ರುಪಾಯಿಗಳ ವೇತನವನ್ನು ತಕ್ಷಣ ನೀಡಬೇಕು.

ಸೇವಾ ಭದ್ರತೆ ಮತ್ತು ನೇರ ಪಾವತಿ

ಎಲ್ಲ ಹಾಸ್ಟೆಲ್ ಮತ್ತು ವಸತಿ ನಿಲಯ ಹೊರಗುತ್ತಿಗೆ ಸಿಬ್ಬಂದಿಗೆ ನಿವೃತ್ತಿಯವರೆಗೂ ಸೇವಾ ಭದ್ರತೆ ಒದಗಿಸಿ, ಕೆಲಸ ಮಾಡುವ ಸ್ಥಳಗಳಲ್ಲಿಯೇ ಖಾಯಂಗೊಳಿಸಿ ನೇರವಾಗಿ ಇಲಾಖೆಯಿಂದ ವೇತನ ಪಾವತಿಸಬೇಕು.

ಗುತ್ತಿಗೆದಾರರಿಂದ ಸಿಗಬೇಕಾದ ದಾಖಲೆಗಳು

ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐ.ಡಿ.ಕಾರ್ಡ್, ಸರ್ವಿಸ್ ಸರ್ಟಿಫಿಕೇಟ್ ನೀಡುವುದರೊಂದಿಗೆ ಇ.ಎಸ್.ಐ. ಮತ್ತು ಪಿ.ಎಫ್. ಹಣ ಪಾವತಿಸಿರುವುದಕ್ಕೆ ಸಂಬಂಧಿಸಿದ ರಶೀದಿಗಳನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇತರ ಪ್ರಮುಖ ಬೇಡಿಕೆಗಳು

  • ಕಾರ್ಮಿಕರ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ಹಾಗೂ ಕೆಲಸದ ಸಮಯವನ್ನು ನಿಗದಿಪಡಿಸಬೇಕು.
  • ಅಪಘಾತಕ್ಕೊಳಗಾದಾಗ ಚಿಕಿತ್ಸಾ ವೆಚ್ಚವನ್ನು ಇಲಾಖೆಯು ಭರಿಸಿ ಪರಿಹಾರ ನೀಡಬೇಕು.
  • ಪ್ರತಿ ತಿಂಗಳು 5ನೇ ತಾರೀಕಿಗೆ ಸಂಬಳ ನೀಡಿ, ಬಾಕಿಯಿರುವ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು.
  • ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಸಂಖ್ಯೆ ಕಡಿತಗೊಳಿಸಿರುವ ಆದೇಶವನ್ನು ರದ್ದುಪಡಿಸಿ, 50 ವಿದ್ಯಾರ್ಥಿಗಳಿಗೆ ಮೂವರು ಸಿಬ್ಬಂದಿಯಂತೆ ನೇಮಿಸುವ ಹಿಂದಿನ ಪದ್ಧತಿಯನ್ನು ಅನುಸರಿಸಬೇಕು. ಹೀಗೆ ಒಟ್ಟು 21 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸೋನಿಯಾ ವರ್ಣೇಕರ್, ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಯ ಸಮಸ್ಯೆಗಳು ಇಲಾಖೆಯ ಗಮನದಲ್ಲಿವೆ ಎಂದು ತಿಳಿಸಿದರು.

ಇಎಸ್ಐ ಮತ್ತು ಪಿಎಫ್ ಸೌಲಭ್ಯವನ್ನು ನಿಯಮಿತವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೊರಗುತ್ತಿಗೆ ನೌಕರರಿಗೆ ಪಿಎಫ್ ಒದಗಿಸುವ ನಿಟ್ಟಿನಲ್ಲಿ ವಸತಿ ಶಾಲೆ ಪ್ರಾಂಶುಪಾಲರಿಂದ ದೃಢೀಕರಣ ಪಡೆಯಲಾಗಿದೆ ಹಾಗೂ ಹೊರಗುತ್ತಿಗೆ ಏಜೆನ್ಸಿಯನ್ನು ಬದಲಿಸಿ ಪಿಎಫ್ ಹಣವನ್ನು ಪ್ರಾಂಶುಪಾಲರ ಮೂಲಕ ನೌಕರರ ಖಾತೆಗೆ ನೀಡಲಾಗುವುದು ಎಂದು ಭರವಸೆ ನೀಡಿದರು.

ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಗೌಡ, ಜಿಲ್ಲಾಧ್ಯಕ್ಷ ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್.ಎಸ್.ಎನ್ ಸೇರಿದಂತೆ ಶಂಕರಪ್ಪ, ಕೃಷ್ಣಮೂರ್ತಿ, ಶಿವಣ್ಣ, ಕಾಂತರಾಜು, ಲತಾ, ಲಲಿತಾ, ಶಾಂತಮ್ಮ, ವಿಜಯಲಕ್ಷ್ಮಿ, ರತ್ನಮ್ಮ, ಶಿವಪ್ಪ, ಆನಂದ್ ಮತ್ತಿತರರು ಪಾಲ್ಗೊಂಡಿದ್ದರು.