BJP State President: ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಶೀಘ್ರ: ಶಿವರಾಜ್ ಚೌಹಾಣ್
ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಶೀಘ್ರದಲ್ಲೇ ನಡೆಯಲಿದೆ ಎಂದು ಪಕ್ಷದ ರಾಜ್ಯ ಚುನಾವಣಾಧಿಕಾರಿಯೂ ಆಗಿರುವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ (BJP State President) ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಶೀಘ್ರದಲ್ಲೇ ಶುರುವಾಗಲಿದೆ. ಚುನಾವಣೆ ಮೂಲಕ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ. ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನದವರೆಗೂ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chauhan) ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಸೇರಿ ಚರ್ಚಿಸಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕ ವಿಕಾಸಕ್ಕೆ ಆದ್ಯತೆ ಕೊಡುತ್ತೇವೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಅವರು ಕರ್ನಾಟಕ ಬಿಜೆಪಿ ಚುನಾವಣಾಧಿಕಾರಿಯೂ ಆಗಿದ್ದಾರೆ.
ಕರ್ನಾಟಕಕ್ಕೆ ಬರಬೇಕಾದ ಅನುದಾನ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಬರುತ್ತಿಲ್ಲ ಎಂಬ ರಾಜ್ಯ ಕಾಂಗ್ರೆಸ್ ಮುಖಂಡರ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಬಿಡುಗಡೆ ಮಾಡಿರುವ ಅನುದಾನ ಸದ್ಬಳಕೆಯಾಗಲಿ. ಅವರು ಅನುದಾನ ಕೇಳದಿದ್ದರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನ ಕೊಟ್ಟರೂ ಕರ್ನಾಟಕ ಸರ್ಕಾರ ಬಳಕೆ ಮಾಡಿಲ್ಲ ಎಂದು ವಾಗ್ದಾಳಿ ಮಾಡಿದರು.
ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರ್ಯವೈಖರಿಯ ಬಗ್ಗೆ ಪಕ್ಷದ ಅನೇಕ ಮುಖಂಡರಲ್ಲಿ ಅಸಮಾಧಾನವಿದೆ. ಹೈಕಮಾಂಡ್ ಮಧ್ಯ ಪ್ರವೇಶದಿಂದ ಬೂದಿ ಮುಚ್ಚಿದ ಕೆಂಡದಂತಿರುವ ಈ ಅಸಮಾಧಾನ ತಣಿಸಲು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಹೈಕಮಾಂಡ್ ನಿರ್ಧರಿಸಿದೆ. ಇದರ ನಡುವೆ ರಾಜ್ಯಾಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ವಿಜಯೇಂದ್ರ ಶತಪ್ರಯತ್ನ ನಡೆಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ಇವರಲ್ಲದೆ ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಅವರ ಹೆಸರು ಕೂಡ ಕೇಳಿಬರುತ್ತಿದೆ.
ಹೊಸ ವರ್ಷದಂದು ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದ್ದ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾತುಕತೆ ನಡೆಸಿದ್ದರು. ಈ ಭೇಟಿಯ ವೇಳೆ ಕರ್ನಾಟಕದ ಭಿನ್ನಮತಕ್ಕೆ ಬ್ರೇಕ್ ಹಾಕುವಂತೆ ಅಮಿತ್ ಶಾ ಅವರಿಗೆ ವಿಜಯೇಂದ್ರ ಮನವಿ ಮಾಡಿದ್ದಾರೆ ಎನ್ನಲಾಗಿದೆ.