ಬೆಂಗಳೂರು: ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಇಂದು (ಜೂ.7) ಅತಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ (Karnataka Weather) ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಮುಂದಿನ 24 ಗಂಟೆಗಳವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಕೆಲವೊಮ್ಮೆ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆಯಿದೆ.
ಇನ್ನು ಮುಂದಿನ 4 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಜೂನ್ 9ವರೆಗೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕೆ? ಸೀಬೆಕಾಯಿ ತಿನ್ನಿ
ಮೇ 8 ಮತ್ತು 9ರಂದು ಕೂಡ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಜೂನ್ 10ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.