ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Weather: ಭಾರಿ ಮಳೆ ಮುನ್ಸೂಚನೆ; ಇಂದು ಉತ್ತರ ಕನ್ನಡ, ಉಡುಪಿಗೆ ರೆಡ್‌ ಅಲರ್ಟ್, ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆಯಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಮಳೆ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು (ಜುಲೈ 7) ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಇನ್ನು ಬೆಳಗಾವಿ, ಧಾರವಾಡ, ಮೈಸೂರು, ಬೆಂಗಳೂರು, ಶಿವಮೊಗ್ಗ ಹಾಸನ ಸೇರಿ 18 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಭರ್ಜರಿ ಮಳೆಯಾಗುವ (Karnataka Weather) ಸಾಧ್ಯತೆ ಇದೆ.

ಮಳೆರಾಯ ಆರ್ಭಟಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ, ಚಿಕ್ಕಮಗಳೂರು, ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ರೆಡ್​​ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 7ರಂದು ರಜೆ ಘೋಷಿಸಲಾಗಿದೆ.

ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ರಜೆ ಘೋಷಿಸಿ ಉತ್ತರ ಕನ್ನಡ ಡಿಸಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ 3 ತಾಲೂಕಿನ ಶಾಲೆಗಳಿಗೆ ರಜೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೊಪ್ಪ, ಶೃಂಗೇರಿ ಮತ್ತು ಕಳಸ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಎರಡು ತಾಲೂಕಿನಲ್ಲಿ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ವ್ಯಾಪಕ ಮಳೆಯ ಹಿನ್ನೆಲೆ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗೆ ಜಿಲ್ಲೆಯ 3 ತಾಲೂಕಿನ ಶಾಲಾ-ಕಾಲೇಜಿಗೆ ರಜೆ

ಶಿವಮೊಗ್ಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಮೂರು ತಾಲೂಕಿನಲ್ಲಿ ಶಾಲಾ, ಕಾಲೇಜುಗಳಿಗೂ ಮಂಗಳವಾರ ರಜೆ ಘೋಷಿಸಲಾಗಿದೆ. ತಹಶೀಲ್ದಾರ್ ಸೂಚನೆ ಮೇರೆಗೆ ಸಾಗರ, ತೀರ್ಥಹಳ್ಳಿ, ಹೊಸನಗರ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಅನ್ವಯಿಸಲಿದೆ. ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಶಾಲಾ ಆಡಳಿತ ಮಂಡಳಿಗೆ ಸೂಚಿಸಲಾಗಿದೆ.

ಸಕಲೇಶಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಹಾಸನ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುಂದುವರಿದಿದ್ದು, ಸಕಲೇಶಪುರ ತಾಲೂಕಿನ ಎಲ್ಲಾ ಶಾಲಾ-ಕಾಲೇಜಿಗಳಿಗೆ ಜುಲೈ 7ರಂದು ರಜೆ ಘೋಷಿಸಲಾಗಿದೆ. ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ ಸುಪ್ರಿತಾ ಈ ಆದೇಶ ಹೊರಡಿಸಿದ್ದಾರೆ. ಸಕಲೇಶಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ನಾಳೆ ರಜೆ ಅನ್ವಯವಾಗಲಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.

ಜುಲೈ 8ರಂದು 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಜುಲೈ 8ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರಗಿ, ಬೆಳಗಾವಿ, ಧಾರವಾಡ, ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಸೇರಿ 20 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು ಸಹಿತ ಮಳೆಯಾಗಲಿದೆ.

ಜುಲೈ 9ರಂದು ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 10ರಂದು ಬೆಳಗಾವಿ, ಧಾರವಾಡ, ಗದಗ, ಕರಾವಳಿ ಜಿಲ್ಲೆಗಳು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೀ ಅಲರ್ಟ್‌ ಘೋಷಿಸಲಾಗಿದ್ದು, ಗುಡುಗುಸಹಿತ ಮಳೆಯಾಗಲಿದೆ.