ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡ್ತೇವೆ: ಸಿಎಂ ಭರವಸೆ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಬುಧವಾರ ಆಯೋಜಿಸಿದ್ದ ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಕಿಸಾನ್ ಸಭಾ ಸಭಾಂಗಣದ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಇದಕ್ಕೂ ಮುನ್ನಾ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.

ಕಾರ್ಕಳ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ.

ಉಡುಪಿ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಬುಧವಾರ ಮಾಧ್ಯಮದೊಂದಿಗೆ ಸಿಎಂ ಮಾತನಾಡಿದರು. ಆನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ಬಾರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ.

ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52,000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗಿದೆ. ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು.

Dharwad Protest: ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ತುರ್ತು ಕ್ರಮ ವಹಿಸಲಿ: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

ಕಾರ್ಕಳದಲ್ಲಿ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಯೋಜನೆಯನ್ನು ಸದ್ಯದಲ್ಲೇ ಪೂರ್ಣಗೊಳಿಸಲಾಗುವುದು. ಶಾಸಕರು ಸಚಿವರಾಗಬಯಸುವುದು ತಪ್ಪಲ್ಲ. ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದರು.

ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಎಲ್ಲ ರೀತಿಯ ಸಹಕಾರ

ಕಾರ್ಕಳದಲ್ಲಿ 2027ರಲ್ಲಿ ನಡೆಯುವ ಐತಿಹಾಸಿಕ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಅರ್ಥಿಕ ಸಹಾಯವನ್ನು ಇಲ್ಲಿನ ಜನಪ್ರತಿನಿಧಿಗಳು ಕೋರಿದ್ದು, ಈ ಕಾರ್ಯಕ್ರಮಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಸಿಎಂ ಮಾತನಾಡಿದರು. ವೈಚಾರಿಕತೆ ಮತ್ತು ವೈಜ್ಞಾನಿಕತೆಯ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಅದರ ಮೂಲ ಉದ್ದೇಶವಾಗಬೇಕು ಎಂದು ಹೇಳಿದರು.

ನಾನು ಕುಟುಂಬದ ಮೊದಲ ಪದವೀಧರನಾಗಿದ್ದು, ವೀರಪ್ಪ ಮೊಯ್ಲಿ ಅವರಂತೆ ಕಷ್ಟದ ಜೀವನವನ್ನು ಕಂಡಿದ್ದೇನೆ. ವೀರಪ್ಪ ಮೊಯ್ಲಿಯವರು ಸಮಾಜದ ಬಡವರ್ಗದವರ ಪರವಾಗಿ ನಿಂತಿದ್ದರು. ತಮ್ಮ ವಕೀಲ ವೃತ್ತಿಯಲ್ಲಿ ಬಡವರಿಗೆ ಉಚಿತವಾಗಿ ವಕಾಲತ್ತು ಮಾಡುತ್ತಿದ್ದು, ತಮ್ಮ ವಕೀಲ ವೃತ್ತಿ ಹಾಗೂ ರಾಜಕೀಯ ಬದುಕಿನಲ್ಲಿ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ಅವರು ಶತಾಯುಷಿಗಳಾಗಿ ಅವರ ಸಮಾಜ ಸೇವೆ ನಿರಂತರವಾಗಿ ಸಾಗಲಿ ಎಂದು ಹಾರೈಸುತ್ತೇನೆ.

ಕಾರ್ಕಳದಲ್ಲಿ ಕಿಸಾನ್ ಸಭಾ ಪ್ರಾರಂಭಿಸಿ, ನಂತರ ಪ್ರೌಢಶಾಲೆಯನ್ನು ಸ್ಥಾಪಿಸಿ, ನಿರ್ಗತಿಕ ಹಾಗೂ ಓದಿನಲ್ಲಿ ಹಿಂದುಳಿದಿರುವ ಮಕ್ಕಳಿಗೆ ಶಿಕ್ಷಣ ನೀಡುವ ಉತ್ತಮ ಕಾರ್ಯದಲ್ಲಿ ವೀರಪ್ಪ ಮೊಯ್ಲಿಯವರು ತೊಡಗಿಸಿಕೊಂಡಿರುವುದು ಸಂತಸದ ಸಂಗತಿ. ಈ ಶಾಲೆಯು 35 ವರ್ಷಗಳನ್ನು ಪೂರೈಸಿದ್ದು, ಇನ್ನೂ ಎತ್ತರಕ್ಕೆ ಬೆಳೆಯುವಂತಾಗಲಿ ಹಾಗೂ ಇಲ್ಲಿನ ವಿದ್ಯಾರ್ಥಿಗಳು ವೈಚಾರಿಕತೆ ಹಾಗೂ ವೈಜ್ಞಾನಿಕತೆಯ ಚಿಂತನೆಯನ್ನು ಅಳವಡಿಸಿಕೊಳ್ಳುವಂತಾಗಲಿ.

ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಉದ್ದೇಶ. ಸಮಾನ ಅವಕಾಶಗಳನ್ನು ಕೊಡುವುದು ಶಿಕ್ಷಣ ಮೂಲ ಉದ್ದೇಶವಾಗಬೇಕು. ಅಸಮಾನತೆಯಿಂದ ಕೂಡಿದ ಸಮಾಜ ವ್ಯವಸ್ಥೆಯಲ್ಲಿ ಶೂದ್ರ ವರ್ಗ ಅಕ್ಷರ ಸಂಸ್ಕೃತಿಯಿಂದ ವಂಚಿತವಾಗಿತ್ತು. ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದೇ, ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲವೆಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿದ್ದರು.

ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಕಾರ್ಕಳದ ಜನತೆಯ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. 2013 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ನೀಡಲಾಗಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. 2023ರಲ್ಲಿ ಪುನ: ಅಧಿಕಾರಕ್ಕೆ ಬಂದು, 590 ಭರವಸೆಗಳನ್ನು ನೀಡಿದ್ದು, ಕಳೆದ ಎರಡೂವರೆ ವರ್ಷದಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ.

ಉಪಮುಖ್ಯಮಂತ್ರಿಗಳೇ ನಿಮ್ಮ 3ನೇ ಮಗನ ಬೈಕಿಗೆ ಇನ್ಶೂರೆನ್ಸ್ ಇಲ್ಲ, ತಲೆಗೆ ಹೆಲ್ಮೆಟ್ ಕೂಡ ಇಲ್ಲ: ನಲಪಾಡ್‌ ಎಡವಟ್ಟು, ಡಿಕೆಶಿಗೆ ಜೆಡಿಎಸ್‌ ತರಾಟೆ

ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52,000 ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದ್ದು, ಎಲ್ಲ ಜಾತಿ ಧರ್ಮಗಳ ಬಡವರಿಗೆ ಗ್ಯಾರಂಟಿಯ ಸವಲತ್ತುಗಳನ್ನು ನೀಡಲಾಗುತ್ತಿದೆ. ಎಲ್ಲ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ, ಇದುವರೆಗೆ 1.20 ಲಕ್ಷ ಕೋಟಿಗಳನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗಿದೆ. ದೇಶದ ಸಂಪತ್ತಿನ ಸಮಾನ ಹಂಚಿಕೆಗೆ ನಮ್ಮ ಪ್ರಯತ್ನ ಸದಾ ಇರಲಿದೆ ಎಂದು ತಿಳಿಸಿದರು.