ಉಡುಪಿ: ಪೆಟ್ರೋಲ್ ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ (Udupi Bus Accident) ಬೈಂದೂರು ತಾಲೂಕಿನ ತ್ರಾಸಿ ಸಮೀಪ ನಡೆದಿದೆ. ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇದರಿಂದ ಬಸ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಬಸ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕಾಗಿ ಬಂದಿದ್ದು, ಮುರುಡೇಶ್ವರದಿಂದ ಉಡುಪಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸುಮಾರು 47 ಮಂದಿ ಪ್ರಯಾಣಿಸುತ್ತಿದ್ದ ಈ ಬಸ್‌ನಲ್ಲಿ ಡಿಕ್ಕಿಯ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು; ತಾಯಿ-ಮಗು ಸಾವು
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಕಾರು ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ ಹಾಗು ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಮಲ್ಲನಘಟ್ಟ ಬಳಿ ನಡೆದಿದೆ.
ಪ್ರಿಯಾಂಕಾ (30) ಹಾಗೂ ಒಂದೂವರೆ ವರ್ಷದ ಮಗು ವೈಭವ್ ಮೃತರು. ಮೃತರು ದೇವನಹಳ್ಳಿ ನಿವಾಸಿಯಾಗಿದ್ದು, ಧರ್ಮಸ್ಥಳಕ್ಕೆ ಹೋಗಿ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.