ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಭಟ್ಕಳ ನದಿ ದುರಂತ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟಿಹಕ್ಕಲ ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಬೆಂಗಳೂರು: ಭಟ್ಕಳದ ತಟ್ಟಿಹಕ್ಕಲ ನದಿ ದುರಂತದಲ್ಲಿ (Bhatkal Tragedy) ಮೃತಪಟ್ಟರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 8 ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟಿಹಕ್ಕಲ ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.

ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ‌ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.

ಏನಿದು ದುರಂತ

ಉತ್ತರ ಕನ್ನಡ ಜಿಲ್ಲೆಯ ​ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪವಿರುವ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಭಾನುವಾರ, ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 8 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

​ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿತ್ತು. ಇದರೊಂದಿಗೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದರಿಂದ ಹೊಳೆಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ಇದರಿಂದ ನೀರಿನ ರಭಸಕ್ಕೆ ಸಿಲುಕಿ ಇವರೆಲ್ಲರೂ ಮುಳುಗಿದ್ದಾರೆ.

​ನದಿಯಲ್ಲಿ ಮುಳುಗಿ ಮೃತಪಟ್ಟವರೆಲ್ಲರ ಮೃತದೇಹಗಳನ್ನು ಅಳ್ವೆಕೋಡಿ ಬಳಿ ಪತ್ತೆಹಚ್ಚಿ ಹೊರತೆಗೆಯಲಾಗಿದೆ. ​ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ​ಉಮೇಶ ನಾಯ್ಕ (30), ​ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ​ಲಕ್ಷ್ಮಿ ಶಿವರಾಮ ನಾಯ್ಕ (49) , ​ಜ್ಯೋತಿ ನಾಗಪ್ಪ ನಾಯ್ಕ (34) , ​ಮಾಲತಿ ನಾಯ್ಕ (38) , ​ಮಾಸ್ತಮ್ಮ ನಾಯ್ಕ ಮೃತರು.

​ಘಟನೆಯಲ್ಲಿ ಅದೃಷ್ಟವಶಾತ್ ನಾಗರತ್ನಾ ಮತ್ತು ಮಹಾದೇವಿ ಎಂಬ ಇಬ್ಬರು ಮಹಿಳೆಯರು ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿಯ ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌; ನೀಟ್‌ ಬರೆದಿದ್ದ ವಿದ್ಯಾರ್ಥಿನಿ ಸಾವಿಗೆ ಕಾರಣ ಬಹಿರಂಗ!

​ಘಟನಾ ಸ್ಥಳಕ್ಕೆ ಭಟ್ಕಳ ಠಾಣೆಯ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಭೇಟಿ ನೀಡಿದ್ದಾರೆ. ನದಿಯಲ್ಲಿ ಇನ್ನೂ ಕೆಲವರು ಕಣ್ಮರೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರ ಸಹಾಯದೊಂದಿಗೆ ತೀವ್ರ ಶೋಧ ಕಾರ್ಯ ಮುಂದುವರಿದಿದೆ.