ಹೊಸಪೇಟೆ, ನ. 28: ಸುಮಾರು 104 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ನೇಮಕಾತಿ ಸೇರಿ ಎಲ್ಲ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಮುಂದಿನ ಮೂರರಿಂದ ಮೂರೂವರೆ ತಿಂಗಳೊಳಗೆ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ (UT Khader) ತಿಳಿಸಿದರು.
ಹೊಸಪೇಟೆ ನಗರದ ಹೊರವಲಯದ ಜಂಬುನಾಥ ಹಳ್ಳಿ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ 250 ಹಾಸಿಗೆ ಸಾಮರ್ಥ್ಯದ ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಉದ್ಘಾಟಿಸಿ, ಮಾತನಾಡಿದರು.
ರಾಜ್ಯದ ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಪೈಕಿ ಅತ್ಯುತ್ತಮ ಕಟ್ಟಡಗಳಲ್ಲಿ ವಿಜಯನಗರ ಜಿಲ್ಲಾ ಆಸ್ಪತ್ರೆಯೂ ಒಂದಾಗಿದೆ. ಕಟ್ಟಡ ಉದ್ಘಾಟನೆಯಾಗಿದ್ದರೂ, ವೈದ್ಯಕೀಯ ಉಪಕರಣಗಳ ಸ್ಥಳಾಂತರ ಹಾಗೂ ಅಗತ್ಯ ಸಿಬ್ಬಂದಿ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಬೇಕಿರುವುದರಿಂದ ಸಾರ್ವಜನಿಕ ಸೇವೆಗೆ ಪೂರ್ಣ ಪ್ರಮಾಣದಲ್ಲಿ ಸಜ್ಜಾಗಲು ಸುಮಾರು ಮೂರು ತಿಂಗಳು ಕಾಲಾವಕಾಶ ಬೇಕಾಗುತ್ತದೆ.
ಜಿಲ್ಲೆಯ ಭವಿಷ್ಯದ ದೃಷ್ಟಿಯಿಂದ ಸುಮಾರು 53 ಎಕರೆ ಪ್ರದೇಶದಲ್ಲಿ ವ್ಯವಸ್ಥೆ ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಆಯುರ್ವೇದ ಆಸ್ಪತ್ರೆ, ಕ್ಯಾನ್ಸರ್ ಘಟಕ, ನರ್ಸಿಂಗ್, ಪ್ಯಾರಾಮೆಡಿಕಲ್ ಕಾಲೇಜು ಹಾಗೂ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಸೌಲಭ್ಯಗಳು ಬರುವ ನಿರೀಕ್ಷೆಯಿದೆ. ಸದ್ಯ ತಾಲೂಕು ಆಸ್ಪತ್ರೆ ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಸಣ್ಣಪುಟ್ಟ ತಪಾಸಣೆಗಳಿಗೆ ಜನರು ಅನಗತ್ಯವಾಗಿ ದೂರದ ಆಸ್ಪತ್ರೆಗೆ ಅಲೆಯುವುದು ತಪ್ಪಲಿದೆ ಎಂದು ಹೇಳಿದರು.
ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಮಾತನಾಡಿ, ವಿಜಯನಗರ ಹೊಸ ಜಿಲ್ಲೆಯಾಗಿದ್ದು, ಇಲ್ಲಿನ ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ರಾಜ್ಯ ಸರ್ಕಾರ ಕ್ರಮವಹಿಸಿದ್ದು, ಜಿಲ್ಲಾ ಆಸ್ಪತ್ರೆಯ ಆರಂಭದೊಂದಿಗೆ ವಿಜಯನಗರ ಜಿಲ್ಲೆಯಲ್ಲಿ ಆರೋಗ್ಯ, ಉದ್ಯೋಗ ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದರು.
ವಿಜಯನಗರ ಜಿಲ್ಲಾ ಆಸ್ಪತ್ರೆಯನ್ನು 104 ಕೋಟಿ ರೂಪಾಯಿ ಮೊತ್ತದಲ್ಲಿ ಸುಂದರವಾಗಿ ಮತ್ತು ಅತ್ಯಾಧುನಿಕ ಸೌಲಭ್ಯ ನೀಡಲು ಅನುವಾಗುವಂತೆ ನಿರ್ಮಿಸಲಾಗಿದೆ. ಹೊರ ರೋಗಿ ವಿಭಾಗ, ಶಸ್ತ್ರಚಿಕಿತ್ಸಾ ವಿಭಾಗ, ಔಷಧಾಲಯ ಸೇರಿ 17ಕ್ಕೂ ಹೆಚ್ಚು ವಿಭಾಗಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಆರಂಭಿಸಲಾಗಿದೆ ಎಂದು ಅವರು ತಿಳಿಸಿದರು.
ಈಗಾಗಲೇ ಜಿಲ್ಲಾ ಆಸ್ಪತ್ರೆಗೆ ಮೊದಲ ಹಂತದಲ್ಲಿ 90 ಸಿಬ್ಬಂದಿಯನ್ನು ಪೂರ್ಣಾವಧಿಗೆ ನೇಮಿಸಲಾಗಿದೆ. ಎರಡನೇಯ ಹಂತದಲ್ಲಿ ಉಳಿದಂತೆ ಎಲ್ಲ ಅಗತ್ಯ ವೈದ್ಯ ಹಾಗೂ ಶೂಶ್ರಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಕ್ರಮವಹಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಗೆ ಕ್ಯಾನ್ಸರ್ ಆಸ್ಪತ್ರೆ
ಜಿಲ್ಲಾ ಆಸ್ಪತ್ರೆಗೆ ಸಾಕಷ್ಟು ಭೂಮಿ ಲಭ್ಯವಿದೆ. ಈ ಪ್ರದೇಶ ಗಣಿನಾಡು ಆಗಿರುವದರಿಂದ ಹೆಚ್ಚಿನ ಕಾರ್ಮಿಕರು ಶ್ವಾಸಕೋಶ ಹಾಗೂ ಇತರ ರೋಗಗಳಿಂದ ಬಾಧಿತರಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಹಕಾರದಿಂದ ಹೊಸಪೇಟೆಯಲ್ಲಿ ಶೀಘ್ರದಲ್ಲಿ ಕ್ಯಾನ್ಸರ್ ಆಸ್ಪತ್ರೆ ಆರಂಭಿಸಲು ಪ್ರಯತ್ನಿಸಲಾಗುತ್ತಿದೆ. ಇದರಿಂದ ವಿಶೇಷವಾಗಿ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ಸಕ್ಕರೆ ಕಾರ್ಖಾನೆ, ಉದ್ಯೋಗ ಸೃಷ್ಟಿಗೆ ಆದ್ಯತೆ
ಜನರ ಬೇಡಿಕೆ ಅನುಗುಣವಾಗಿ ಸೂಕ್ತ ಸ್ಥಳದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ. ಜನರಿಗೆ ಅಗತ್ಯವಾದಷ್ಟು ಉದ್ಯೋಗಗಳನ್ನು ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಬಳ್ಳಾರಿ ಸಂಸದ ಈ. ತುಕಾರಾಂ, ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ ಶಾಸಕ ಎಚ್.ಆರ್. ಗವಿಯಪ್ಪ ಮಾತನಾಡಿದರು. ಜಿಲ್ಲಾ ಆಸ್ಪತ್ರೆಗೆ ದಾರಿ ಮಾಡಿಕೊಳ್ಳಲು ಒಂದು ಎಕರೆ ಭೂಮಿ ದಾನ ನೀಡಿರುವ ಮಹಾದಾನಿ ವಿದ್ಯಾಬಾಯಿ ಅವರನ್ನು ಹಾಗೂ ಸುಸಜ್ಜಿತವಾದ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಶ್ರಮಿಸಿದ ಅಧಿಕಾರಿ, ಸಿಬ್ಬಂದಿ, ಗುತ್ತಿಗೆದಾರರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ನಂತರ ಹೊಸಪೇಟೆ ವಿಧಾನಸಭಾ ವ್ಯಾಪ್ತಿಯ ಫಲಾನುಭವಿಗಳಿಗೆ ನಿವೇಶನದ ಹಕ್ಕು ಪತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಸೇರಿ ವಿತರಿಸಿದರು.
ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನ
ನಗರಸಭೆ ಅಧ್ಯಕ್ಷ ರೂಪೇಶ ಕುಮಾರ ಎನ್. ಮಾತನಾಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಲ್.ಆರ್. ಶಂಕರ ನಾಯ್ಕ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಮೂರ್ತಿ ಕೆ., ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಅಪರ ಜಿಲ್ಲಾಧಿಕಾರಿ ಲೋಕೇಶ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಲ್.ಆರ್. ಶಂಕರ್ ನಾಯ್ಕ್, ಡಿಎಚ್ಓ ಡಾ. ಲಿಂಗರಾಜು ಟಿ. ಹಾಗೂ ಇತರರು ಉಪಸ್ಥಿತರಿದ್ದರು.