Tuesday, 17th May 2022

ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವು ಹೆಚ್ಚಳ: 6,379 ಕ್ಯುಸೆಕ್ ಒಳಹರಿವು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಮಂಗಳವಾರ 1,228 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. ಬುಧವಾರ 6,379 ಕ್ಯುಸೆಕ್ ಒಳಹರಿವು ದಾಖಲಾಗಿದೆ.

ಕೇರಳ ಮತ್ತು ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆಯಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಗರಿಷ್ಠ 124.80 ಅಡಿ ಎತ್ತರದ ಜಲಾಶಯದಲ್ಲಿ ಪ್ರಸ್ತುತ 82.50 ಅಡಿ ನೀರಿನ ಸಂಗ್ರಹವಿದೆ. ಗರಿಷ್ಠ 49.452 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದಾಗಿದೆ. ಕೆಆರ್‌ಎಸ್ ಜಲಾಶಯದ ನೀರನ್ನು ಕುಡಿಯುವ ನೀರು, ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಗಾಗಿ ಬಳಸಿಕೊಳ್ಳಲಾಗುತ್ತದೆ.

ಮಂಡ್ಯ, ಮೈಸೂರು ಮತ್ತು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಕೆಆರ್‌ಎಸ್ ಜಲಾಶಯದ ಪಾತ್ರ ಮಹತ್ವದ್ದು. ಕರ್ನಾಟಕ ತಮಿಳುನಾಡಿಗೆ ಕೆಆರ್‌ಎಸ್ ಮೂಲಕವೇ ನೀರನ್ನು ಹಂಚಿಕೆ ಮಾಡುತ್ತದೆ.