ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿ ಹೋಬಳಿಯ ಜಕ್ಕೇನಹಳ್ಳಿ ಗ್ರಾಮದಲ್ಲಿರುವ ಸುಪ್ರಸಿದ್ಧ ಅಹೋಬಲ ಲಕ್ಷ್ಮೀ ನರಸಿಂಹ ಸ್ವಾಮಿಯ ಬ್ರಹ್ಮರಥೋತ್ಸವ ಪ್ರತಿ ವರ್ಷದಂತೆ ಈ ವರ್ಷವು ಅದ್ಧೂರಿಯಾಗಿ ನೆರವೇರಿತು. ಗುರುವಾರ ಮಧ್ಯಾಹ್ನ 12 ಗಂಟೆಗೆ ರಥೋತ್ಸವಕ್ಕೆ ಬಹು ಭಾಷೆ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ಚಾಲನೆ ನೀಡಿದರು. ಬಳಿಕ ಅವರು ನರಸಿಂಹ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಸಾವಿರಾರು ಭಕ್ತರು ಅಹೋಬಲ ಲಕ್ಷ್ಮೀ ನರಸಿಂಹ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದರು. ಈ ವೇಳೆ ನೂರಾರು ಅಭಿಮಾನಿಗಳು ಮತ್ತು ಭಕ್ತರು ತಮ್ಮ ನೆಚ್ಚಿನ ನಟರ ಜತೆ ಫೋಟೋ ತೆಗೆಸಿಕೊಳ್ಳಲು ಮುಗಿಬಿದ್ದರು. ರಥೋತ್ಸವದದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದ ಹಾಗೆ ಬಡವನಹಳ್ಳಿ ಪೊಲೀಸ್ ಠಾಣೆಯ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.