ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Abdul Rahiman Murder Case: ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ, 15 ಮಂದಿ ವಿರುದ್ಧ ಪ್ರಕರಣ‌; ಪರಿಚಯದವರೇ ಕೊಲೆಗಾರರು!

Bantwala abdul rahiman murder case: ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಬಂಟ್ವಾಳ ರಹಿಮಾನ್ ಹತ್ಯೆ, 15 ಮಂದಿ ಮೇಲೆ FIR, ಪರಿಚಯದವರೇ ಕೊಲೆಗಾರರು!

ಅಬ್ದುಲ್‌ ರಹಿಮಾನ್‌ ಕೊಲೆ ನಡೆದ ಸ್ಥಳ

ಹರೀಶ್‌ ಕೇರ ಹರೀಶ್‌ ಕೇರ May 28, 2025 10:08 AM

ಬಂಟ್ವಾಳ: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆ ಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ. ಬಂಟ್ವಾಳ (Bantwala) ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆ ಯತ್ನ ಮಂಗಳವಾರ ನಡೆದಿತ್ತು.

ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ತಿಳಿದು ಬಂದಿದೆ. ಅಬ್ದುಲ್ ರಹಿಮಾನ್ ಮತ್ತು ಕಂದರ್ ಶಾಫಿ ಅವರು ನದಿ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುವ ಸಮಯದಲ್ಲಿ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್‌ಗಳೊಂದಿಗೆ ತಿವಿದು, ಕಡಿದರು. ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ, ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರಿನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ಬಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮೃತ ಅಬ್ದುಲ್ ರಹಿಮಾನ್ ಅವರು ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದು ತೀವ್ರವಾಗಿ ಗಾಯಗೊಂಡ ಕಲಂದರ್ ಶಾಫಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಊರಿನ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಘಟನೆಗೆ ಸಂಬಂಧಿಸಿ ದುಷ್ಕರ್ಮಿಗಳಿಂದ ಕೊಲೆ ಯತ್ನಕ್ಕೀಡಾಗಿದ್ದ ಕಲಂದರ್ ಶಾಫಿ ಅವರು ನೀಡಿದ ಮಾಹಿತಿ ಆಧರಿಸಿ ನಾಸೀರ್ ಅವರು ನೀಡಿದ ದೂರಿನಂತೆ ಬಂಟ್ವಾಳ‌ ಪೊಲೀಸರು ಭಾರತೀಯ ನ್ಯಾಯ‌ ಸಂಹಿತೆ ಕಾಯ್ದೆಯಡಿ 2023 (Uls-103, 109, 118(1), 118(2), 190, 191(1), 191(2), 191(3) ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಪ್ರಕರಣ ಬೇಧಿಸಲು 5 ಪೊಲೀಸ್ ತಂಡ

ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆ ಯತ್ನ ಪ್ರಕರಣ‌ದಲ್ಲಿ ಆರೋಪಿಗಳ ಬಂಧನಕ್ಕಾಗಿ ಡಿವೈಎಸ್ಪಿ ವಿಜಯ ಪ್ರಕಾಶ್ ನೇತೃತ್ವದಲ್ಲಿ 5 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಸದ್ಯ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳ ಮಾಹಿತಿ ಕಲೆಹಾಕಲಾಗಿದೆ. ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ತಂಡ ಮತ್ತು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ನಡೆಸಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

ಇದನ್ನೂ ಓದಿ: Murder Case: ಬಂಟ್ವಾಳದಲ್ಲಿ ಯುವಕನ ಕೊಲೆ: ದಕ್ಷಿಣ ಕನ್ನಡ ಮತ್ತೆ ಉದ್ವಿಗ್ನ, ನಿಷೇಧಾಜ್ಞೆ ಜಾರಿ