Bomb threat: ಕಲಬುರಗಿ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ; ಬಾಂಬ್ ಸ್ಕ್ವಾಡ್‌ನಿಂದ ತಪಾಸಣೆ
Kalaburagi News: ಬೆಂಗಳೂರಿನ 112ಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ಹೇಳಿದ್ದಾನೆ. ಈ ಬಗ್ಗೆ ಬೆಂಗಳೂರಿನ ಪೊಲೀಸ್ ಅಧಿಕಾರಿಗಳು ಕಲಬುರಗಿ ಕಂಟ್ರೋಲ್ ರೂಮ್‌ಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ವೇಳೆ ಹುಸಿ ಬಾಂಬ್ ಬೆದರಿಕೆ ಎನ್ನುವುದು ಬೆಳಕಿಗೆ ಬಂದಿದೆ.


ಕಲಬುರಗಿ: ಕಲಬುರಗಿ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ (Bomb threat) ಬಂದ ಹಿನ್ನೆಲೆ ಮಂಗಳವಾರ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಅಪರಿಚಿತ ವ್ಯಕ್ತಿಯಿಂದ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿದೆ. ಇದರಿಂದ ತಕ್ಷಣ ಸ್ಟೇಷನ್ ಬಜಾರ್ ಪೊಲೀಸರು, ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಸಿಬ್ಬಂದಿ ರೈಲ್ವೆ ನಿಲ್ದಾಣಕ್ಕೆ ಧಾವಿಸಿ ತಪಾಸಣೆ ನಡಸಿದರು.
ಬೆಂಗಳೂರಿನ 112 ಗೆ ಕರೆ ಮಾಡಿ ಬಾಂಬ್ ಇಟ್ಟಿರುವದಾಗಿ ಅಪರಿಚಿತ ಹೇಳಿದ್ದಾನೆ. ಬೆಂಗಳೂರಿನ ಪೊಲೀಸ್ ಅಧಿಕಾರಿಗಳು ಕಲಬುರಗಿ ಕಂಟ್ರೋಲ್ ರೂಮ್‌ಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ವೇಳೆ ಹುಸಿ ಬಾಂಬ್ ಬೆದರಿಕೆ ಎನ್ನುವುದು ಬೆಳಕಿಗೆ ಬಂದಿದೆ. ಹುಸಿಬಾಂಬ್ ಕರೆ ಮಾಡಿದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಅಪಘಾತ, ಇಬ್ಬರ ದುರ್ಮರಣ

ಬೆಂಗಳೂರು: ತಮಿಳುನಾಡಿನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಖಾಸಗಿ ಬಸ್ (Road Accident) ಅಪಘಾತಕ್ಕೀಡಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ತಮಿಳುನಾಡಿನ ಹೊಸೂರು ಬಳಿಯ ಕರುಕಂಪಟ್ಟಿಯಲ್ಲಿ ಅಪಘಾತ ಸಂಭವಿಸಿದೆ. ಮಧುರೈನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ (Bus Accident) ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಉತ್ತನಪಲ್ಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅತಿವೇಗವೇ ಈ ದುರ್ಘಟನೆಗೆ ಪ್ರಮುಖ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಈ ದುರ್ಘಟನೆ ರಾಷ್ಟ್ರೀಯ ಹೆದ್ದಾರಿ 44ರ ಕರುಕಂಪಟ್ಟಿಯ ತಿರುವಿನಲ್ಲಿ ಸಂಭವಿಸಿದೆ. ಮಧುರೈನಿಂದ ಬೆಂಗಳೂರಿಗೆ ಬರುತ್ತಿದ್ದ ಈ ಬಸ್‌ನಲ್ಲಿ ಬಹುತೇಕ ಪ್ರಯಾಣಿಕರು ಬೆಂಗಳೂರಿನ ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಕುಟುಂಬದವರಾಗಿದ್ದರು. ಚಾಲಕನಿಗೆ ತಿರುವಿನಲ್ಲಿ ಬಸ್‌ನ ನಿಯಂತ್ರಣ ತಪ್ಪಿದ್ದರಿಂದ, ವಾಹನವು ರಸ್ತೆಯಿಂದ ಜಾರಿ ಹಳ್ಳಕ್ಕೆ ಬಿದ್ದಿದೆ. ಈ ಘಟನೆಯಿಂದ ಬಸ್‌ನ ಕಿಟಕಿಗಳು ಮತ್ತು ಮುಂಭಾಗ ಧ್ವಂಸಗೊಂಡಿದ್ದು, ಕೆಲವು ಪ್ರಯಾಣಿಕರು ಸೀಟುಗಳಿಗೆ ಸಿಕ್ಕಿಹಾಕಿಕೊಂಡಿದ್ದರು.
ಸ್ಥಳೀಯರು ಮತ್ತು ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರ ವಾಹನದ ಚಾಲಕರು ತಕ್ಷಣ ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ಗಾಯಾಳುಗಳಲ್ಲಿ ಕೆಲವರಿಗೆ ತಲೆ, ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣ ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಉತ್ತನಪಲ್ಲಿ ಪೊಲೀಸ್ ಠಾಣೆಯ ಸಿಬ್ಬಂದಿ ಘಟನೆಯ ಸ್ಥಳಕ್ಕೆ ತಕ್ಷಣ ಆಗಮಿಸಿ, ಗಾಯಾಳುಗಳನ್ನು 108 ಆಂಬ್ಯುಲೆನ್ಸ್ ಮೂಲಕ ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಚಿಂತಾಜನಕ ಸ್ಥಿತಿಯಲ್ಲಿರುವ ಮೂವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಆಸ್ಪತ್ರೆಯ ವೈದ್ಯರು, “ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ಆರಂಭವಾಗಿದೆ. ಕೆಲವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ” ಎಂದು ತಿಳಿಸಿದ್ದಾರೆ.
ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. “ಅತಿವೇಗ ಮತ್ತು ಚಾಲಕನ ಎಚ್ಚರಿಕೆಯ ಕೊರತೆಯೇ ಈ ದುರ್ಘಟನೆಗೆ ಕಾರಣ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ” ಎಂದು ಉತ್ತನಪಲ್ಲಿ ಠಾಣೆಯ ಇನ್ಸ್‌ಪೆಕ್ಟರ್ ಮುನಿರಾಜ್ ತಿಳಿಸಿದ್ದಾರೆ. ಕರುಕಂಪಟ್ಟಿಯ ಈ ರಸ್ತೆಯಲ್ಲಿ ಆಗಾಗ ದುರ್ಘಟನೆಗಳು ಸಂಭವಿಸುತ್ತಿರುವುದರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ರಸ್ತೆಯ ತಿರುವು ತೀವ್ರವಾಗಿದ್ದು, ಸೂಕ್ತ ಸಂಕೇತ ಫಲಕಗಳಿಲ್ಲ. ರಾತ್ರಿಯ ಸಮಯದಲ್ಲಿ ಬೆಳಕಿನ ವ್ಯವಸ್ಥೆಯೂ ಕಳಪೆಯಾಗಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ: Road Accident: ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು