ಮುಂಬಯಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಕೊನೆಗೂ ಭಾರತ ತಂಡ ಅಂತಿಮಗೊಂಡಿದೆ. ಶನಿವಾರ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, 2023ರಲ್ಲಿ ಏಕದಿನ ವಿಶ್ವಕಪ್ ಫೈನಲ್ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವೇಗಿ ಮೊಹಮ್ಮದ್ ಶಮಿ ಮತ್ತು ಕನ್ನಡಿಗ ಕೆ.ಎಲ್ ರಾಹುಲ್ ಕೂಡ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿದ್ದಾರೆ.
ತಂಡವನ್ನು ರೋಹಿತ್ ಶರ್ಮ ಮುನ್ನಡೆಸಲಿದ್ದು ಯುವ ಆಟಗಾರ ಶುಭಮನ್ ಗಿಲ್‌ಗೆ ಉಪನಾಯಕ ಜವಾಬ್ದಾರಿ ನೀಡಲಾಗಿದೆ. ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಡಲಾಗಿದೆ. ಯಶಸ್ವಿ ಜೈಸ್ವಾಲ್ ಏಕದಿನ ತಂಡಕ್ಕೆ ಚೊಚ್ಚಲ ಕರೆ ಪಡೆದಿದ್ದಾರೆ. ಬುಮ್ರಾ ಕೇವಲ ಚಾಂಪಿಯನ್ಸ್ ಟ್ರೋಫಿ ಮಾತ್ರ ಆಡಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಇವರ ಸ್ಥಾನದಲ್ಲಿ ಹರ್ಷಿತ್ ರಾಣಾ ಅವಕಾಶ ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ವೇಳೆ ಬೆನ್ನು ನೋವಿನ ಗಾಯಕ್ಕೆ ತುತ್ತಾಗಿದ್ದ ಜಸ್‌ಪ್ರೀತ್ ಬುಮ್ರಾ ಅವರು ಗಾಯದಿಂದಾಗಿ ಚಾಂಪಿಯನ್ಸ್ ಟ್ರೋಫಿ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ತೊಡೆಸಂದು ಗಾಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕುಲ್‌ದೀಪ್ ಯಾದವ್ ಕೂಡ ತಂಡಕ್ಕೆ ಮರಳಿದ್ದಾರೆ. 14 ತಿಂಗಳ ಬಳಿಕ ಶಮಿ ಆಡುತ್ತಿರುವ ಮೊದಲ ಐಸಿಸಿ ಟೂರ್ನಿ ಇದಾಗಿದೆ. ಶ್ರೇಯಸ್ ಅಯ್ಯರ್ ಕೂಡ ತಂಡಕ್ಕೆ ಮರಳಿದ್ದಾರೆ.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್, ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ, ರಿಷಭ್ ಪಂತ್.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಶದೀಪ್ ಸಿಂಗ್, ಯಶಸ್ವಿ ಜೈಸ್ವಾಲ್ ರವೀಂದ್ರ ಜಡೇಜಾ.
ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್ ರಾಬಿನ್ ಲೀಗ್ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್ಗೇರಲಿವೆ. ಫೈನಲ್ ಪಂದ್ಯ ಮಾರ್ಚ್ 9ರಂದು ಲಾಹೋರ್ನಲ್ಲಿ ನಿಗದಿಯಾಗಿದೆ. ಆದರೆ ಭಾರತ ತಂಡ ಫೈನಲ್ಗೆ ಅರ್ಹತೆ ಪಡೆದರೆ ಈ ಪಂದ್ಯ ದುಬೈನಲ್ಲಿ ನಡೆಯಲಿದೆ. ಮಾರ್ಚ್ 10 ಫೈನಲ್ಗೆ ಮೀಸಲು ದಿನವಾಗಿದೆ. 2 ಸೆಮಿಫೈನಲ್ ಪಂದ್ಯಗಳಿಗೂ ಮೀಸಲು ದಿನವಿದೆ. ಆದರೆ ಲೀಗ್ ಪಂದ್ಯಗಳಿಗೆ ಮೀಸಲು ದಿನ ಇರುವುದಿಲ್ಲ. ಭಾರತ ತಂಡ ಸೆಮಿಫೈನಲ್ಗೇರಿದರೆ ದುಬೈನಲ್ಲಿ ಮತ್ತು ಪಾಕಿಸ್ತಾನ ಸೆಮಿಫೈನಲ್ಗೇರಿದರೆ ಲಾಹೋರ್ನಲ್ಲಿ ಆಡಲಿದೆ.
ಗುಂಪುಗಳು
'ಎ': ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ಬಾಂಗ್ಲಾದೇಶ
'ಬಿ': ದಕ್ಷಿಣ ಆಫ್ರಿಕಾ, ಆಸ್ಟ್ರೆಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್