ಗೌರಿಬಿದನೂರು: ಜಗಜ್ಯೋತಿ ಬಸವೇಶ್ವರರು ಹಾಗೂ ಶರಣರ ಪರಂಪರೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಮತ್ತು ಕೃತಿ ಪ್ರಕಟಿಸಿರುವುದನ್ನು ಖಂಡಿಸಿ, ರವಿ ಹಂಜ್(Ravi Hanj) ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕು ವೀರಶೈವ ಸೇವಾ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಮಹೇಂದ್ರ ಕುಮಾರ್ ಮಾತನಾಡಿ, ಬಸವೇಶ್ವರರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಸಮಾನತೆ, ಕಾಯಕ, ದಾಸೋಹ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಸಮಾಜ ಸುಧಾರಕರು. 12ನೇ ಶತಮಾನದಲ್ಲಿಯೇ ಜಾತಿ, ಧರ್ಮ, ಮೇಲು-ಕೀಳು ಎಂಬ ಭೇದಭಾವಗಳನ್ನು ವಿರೋಧಿಸಿ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಅವರ ತತ್ವಾದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದರು.
ವಚನಗಳ ಮೂಲಕ ಸಮಾಜದಲ್ಲಿನ ಅನಿಷ್ಟ ಪದ್ಧತಿ, ಅಸಮಾನತೆ ಹಾಗೂ ಮೂಢನಂಬಿಕೆಗಳ ವಿರುದ್ಧ ಧ್ವನಿ ಎತ್ತಿದ್ದ ಬಸವಣ್ಣನವರು, ಎಲ್ಲರೂ ಸಮಾನರು ಎಂಬ ಮಾನವೀಯ ಸಂದೇಶ ಸಾರಿದ್ದಾರೆ. ಇಂತಹ ಮಹಾನ್ ವ್ಯಕ್ತಿತ್ವ ಹಾಗೂ ಶರಣರ ಪವಿತ್ರ ಪರಂಪರೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದು ಮತ್ತು ಅಗೌರವ ತೋರುವ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೀರಶೈವ ಸೇವಾ ಸಮಿತಿ ಉಪಾಧ್ಯಕ್ಷ ಜಿ.ಆರ್.ನವೀನ್ ಕುಮಾರ್ ಮಾತನಾಡಿ, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಪರಸ್ಪರ ಗೌರವ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸಮಾಜದ ಮಹಾನ್ ನಾಯಕರನ್ನು ಅವಮಾನಿಸುವುದು ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಘಟನೆ ಗಳು ಸಾಮಾಜಿಕ ಅಶಾಂತಿಗೆ ಕಾರಣವಾಗುವ ಸಾಧ್ಯತೆಯಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವೀರಶೈವ ಉಚಿತ ವಿದ್ಯಾರ್ಥಿ ನಿಲಯದ ಅಧ್ಯಕ್ಷ ದೇವಿ ಮಂಜುನಾಥ್ ಮಾತನಾಡಿ, ಬಸವಣ್ಣ ನವರ ತತ್ವಾದರ್ಶಗಳು ಮತ್ತು ಶರಣರ ಪರಂಪರೆಯ ಗೌರವವನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವೀರಶೈವ ಸೇವಾ ಸಮಿತಿ ನಿರ್ದೇಶಕರಾದ ಎಚ್.ಪಿ. ನಟರಾಜ್, ಜಿ.ಆರ್. ಪ್ರವೀಣ್ ಕುಮಾರ್, ನಟರಾಜ್, ಅಖಿಲ ಭಾರತ ವೀರಶೈವ ಮಹಾಸಭಾ ಖಜಾಂಚಿ ಆರ್. ಮಂಜುನಾಥ್, ಮುಖಂಡ ರಾದ ಜಿ. ರಾಜಣ್ಣ, ಎಂ.ಸಿ. ಶಿವಶಂಕರ್, ಮಲ್ಲಿಕಾರ್ಜುನಯ್ಯ, ಸೋಮೇಶ್, ಎನ್.ಇ. ಮಲ್ಲಿಕಾರ್ಜುನ್, ಶಿವಶಂಕರ್ ಆರಾಧ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.