ಶಿವಮೊಗ್ಗ: ಶಿವಮೊಗ್ಗ (Shivamogga news) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಿನ್ನೆ ಸಿಇಟಿ ಪರೀಕ್ಷೆ (CET Exam) ಬರೆಯಲು ಆಗಮಿಸಿದ ಅಭ್ಯರ್ಥಿಯ ಜನಿವಾರವನ್ನು (Sacred thread) ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Education minister Madhu Bangarappa) ಪ್ರತಿಕ್ರಿಯೆ ನೀಡಿದ್ದು, ಯಾರು ಈ ರೀತಿ ನಡೆದುಕೊಂಡಿದ್ದಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಈ ಕೃತ್ಯವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಖಂಡಿಸಿದ್ದರು.
ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈ ರೀತಿ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅಲ್ಲದೆ ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಹಾಗಾಗಿ ಸಂಬಂಧಪಟ್ಟ ಇಲಾಖೆ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುತ್ತದೆ. ನನ್ನ ಇಲಾಖೆ ಇಲ್ಲ ಅಂದರೂ ಕೂಡ ಸಂಬಂಧಪಟ್ಟ ಇಲಾಖೆಗೆ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಆಗಿರುವುದರಿಂದ ಕಠಿಣವಾದ ಕ್ರಮ ತೆಗೆದುಕೊಳ್ಳುವ ಸೂಚನೆ ನೀಡಿದ್ದೇನೆ ಎಂದರು.
ಈ ರೀತಿ ಮಾಡುವುದು ಸರಿಯಲ್ಲ. ಇಂತಹದು ಬಹಳ ಸೂಕ್ಷ್ಮವಾದ ವಿಚಾರಗಳು ಇರುತ್ತವೆ. ಯಾವುದೇ ಜಾತಿ ಧರ್ಮಕ್ಕೆ ಆಗಲಿ ಗೌರವ ಕೊಡಬೇಕು. ಈ ರೀತಿ ಆದರೆ ನಮ್ಮ ಸರ್ಕಾರದಲ್ಲಿ ಕಠಿಣವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಯಾಕೆ ಈ ರೀತಿ ಆಗಿದೆ ಹಾಗೂ ಯಾರು ಈ ರೀತಿ ಮಾಡಿದವರು ಎನ್ನುವುದನ್ನು ತಿಳಿದು ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಬ್ರಾಹ್ಮಣ ಸಂಘಟನೆಗಳ ಖಂಡನೆ
ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಖಂಡಿಸಿದ್ದಾರೆ. ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕಾಲೇಜಿನ ಒಳಗೆ ತೆರಳುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಗಳು ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿದ್ದಾರೆ. ಈ ರೀತಿ ಗಾಯತ್ರಿ ದೀಕ್ಷೆ ಪಡೆದು ಆತ್ಮಸಾಕ್ಷಾತ್ಕಾರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಅಧಿಕಾರಿಗಳು ತೆಗೆಸಿದ್ದು ಅವಮಾನಕಾರಿಯಾಗಿದೆ. ಈ ಘಟನೆ ಖಂಡನೀಯವಾಗಿದೆ ಎಂದು ಬ್ರಾಹ್ಮಣ ಸಂಘಗಳ ಒಕ್ಕೂಟ ಖಂಡಿಸಿದೆ.
ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ, ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋಧಿ ಕೃತ್ಯ ಎಸಗಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.