#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Invest Karnataka 2025: ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

Invest Karnataka 2025: ಕರ್ನಾಟಕವು ಜ್ಞಾನ ಮತ್ತು ಸಂಪತ್ತು ಎರಡೂ ಮೇಳೈಸಿರುವ ರಾಜ್ಯವಾಗಿದೆ. ದೇಶದ ತಂತ್ರಜ್ಞಾನ ರಾಜಧಾನಿಯಾಗಿರುವ ಬೆಂಗಳೂರು ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಯುವಜನರ ಆಗರವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

Profile Prabhakara R Feb 11, 2025 8:15 PM

ಬೆಂಗಳೂರು: ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ (Invest Karnataka 2025) ಹೇಳಿಮಾಡಿಸಿದ ರಾಜ್ಯವಾಗಿದೆ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಈ ಮೆಚ್ಚುಗೆಯ ಮಾತು ಮತ್ತು ಅದಮ್ಯ ಭರವಸೆಯ ಮೂಲಕ ಅವರು ಮಂಗಳವಾರ ಇಲ್ಲಿ `ಜಾಗತಿಕ ಹೂಡಿಕೆದಾರರ ಸಮಾವೇಶ’ವಾದ ಇನ್ವೆಸ್ಟ್ ಕರ್ನಾಟಕ-2025ಕ್ಕೆ ಚಾಲನೆ ನೀಡಿದರು. ಫೆ.14ರವರೆಗೆ ನಡೆಯಲಿರುವ ಸಮಾವೇಶದಲ್ಲಿ ಜಗತ್ತಿನ ನಾನಾ ಭಾಗಗಳ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಕರ್ನಾಟಕವು ಜ್ಞಾನ ಮತ್ತು ಸಂಪತ್ತು ಎರಡೂ ಮೇಳೈಸಿರುವ ರಾಜ್ಯವಾಗಿದೆ. ದೇಶದ ತಂತ್ರಜ್ಞಾನ ರಾಜಧಾನಿಯಾಗಿರುವ ಬೆಂಗಳೂರು ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಯುವಜನರ ಆಗರವಾಗಿದೆ. ಇಲ್ಲಿರುವ ಶಕ್ತಿ, ಮಹತ್ತ್ವಾಕಾಂಕ್ಷೆ ಮತ್ತು ಇಲ್ಲಿ ನಡೆಯುತ್ತಿರುವ ನಿರ್ಣಾಯಕ ಕೆಲಸಗಳು ದೇಶವನ್ನು ಎತ್ತರಕ್ಕೆ ಕೊಂಡೊಯ್ಯುತ್ತಿವೆ. ಇಲ್ಲಿಂದ ಸದ್ಯದಲ್ಲೇ ಕೃತಕ ಬುದ್ಧಿಮತ್ತೆ ಕ್ಷೇತ್ರದ ಪ್ರಪ್ರಥಮ ಮಾದರಿ ಕೂಡ ಹೊರಬರಲಿದೆ. ಇದಕ್ಕೆಲ್ಲ ಇಲ್ಲಿರುವ ಮಾನವ ಸಂಪನ್ಮೂಲ ಮತ್ತು ಸನ್ನದ್ಧವಾಗಿರುವ ಪ್ರತಿಭೆಯೇ ಕಾರಣ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Rajnath Singh

ಮಾರುಕಟ್ಟೆ ಆಧರಿತ ಆರ್ಥಿಕತೆ ಮಾತ್ರ ಸುಸ್ಥಿರ ಆರ್ಥಿಕತೆಯನ್ನು ಸೃಷ್ಟಿಸಬಲ್ಲದು. ಇದು ಸಾಧ್ಯವಾಗಬೇಕೆಂದರೆ ಖಾಸಗಿ ಉದ್ಯಮಿಗಳು ಬಹಳ ಮುಖ್ಯ. ಹಿಂದೆ ಹೂಡಿಕೆದಾರರಿಗೆ ಕೆಂಪುಪಟ್ಟಿಯ ತೊಂದರೆ ಎದುರಾಗುತ್ತಿತ್ತು, ಆದರೆ ಈಗ ರತ್ನಗಂಬಳಿಯ ಸ್ವಾಗತ ಸಿಗುತ್ತಿದೆ. ಭಾರತವು ಜಗತ್ತಿನ ಅತಿದೊಡ್ಡ ಮಾರುಕಟ್ಟೆಯಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಸರಕಾರದಿಂದ ಪ್ರಮುಖ ನಿರ್ಧಾರಗಳೂ ಹೊರಬರುತ್ತಿವೆ. ಬೆಂಗಳೂರಿನ ನಿರ್ಣಾಯಕ ಪಾತ್ರದಿಂದ ಭಾರತವು ವೈಮಾಂತರಿಕ್ಷ ಕ್ಷೇತ್ರದಲ್ಲೂ ಅಸಾಧಾರಣ ಸಾಧನೆಗಳನ್ನು ಮಾಡುತ್ತಿದೆ ಎಂದು ರಾಜನಾಥ್ ಶ್ಲಾಘಿಸಿದ್ದಾರೆ.



12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ.ಬಿ.ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಂಗಳವಾರ ಹೇಳಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು. ಕೆಐಎಡಿಬಿ ರಾಜ್ಯದಲ್ಲಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು ವಿಸ್ತೀರ್ಣದ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿದ್ದು, ಇಲ್ಲಿ 25 ಸಾವಿರ ಕೈಗಾರಿಕೆಗಳು ನೆಲೆಯೂರಿವೆ’ ಎಂದರು.

ಉತ್ಪಾದನಾ ವೆಚ್ಚ ಕಡಿಮೆಯಾಗಿ, ದಕ್ಷತೆ ಹೆಚ್ಚಾಗಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ಇದನ್ನು ಸಾಧಿಸಲು `ಕ್ಲಸ್ಟರ್ ಆಧಾರಿತ ನೀತಿ’ ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಬೇರೆಬೇರೆ ಭಾಗಗಳಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಇ.ವಿ.ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್-ಟೆಕ್ ಮತ್ತು ಡ್ರೋನ್ ಪಾರ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಿಗೆ ಹತ್ತಿರದ ನದಿಮೂಲಗಳಿಂದ ಶುದ್ಧ ಕುಡಿಯುವ ನೀರು ಪೂರೈಸಲು 3,800 ಕೋಟಿ ರೂ. ಮೊತ್ತದ ಬೃಹತ್ ಯೋಜನೆ ರೂಪಿಸಲಾಗಿದೆ ಎಂದು ಅವರು ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಚೀನಾದಿಂದ ತೀವ್ರ ಸವಾಲು ಎದುರಾಗಿದ್ದು, ತಯಾರಿಕೆ ವಲಯದ ಚಿತ್ರಣವೇ ಬದಲಾಗಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಜಾಗತಿಕ ಅಸ್ಥಿರತೆಯ ಸಮಸ್ಯೆಯೂ ಇದೆ. ಸರಕಾರವು ಪ್ರಗತಿಗೆ ಹೊಸ ಭಾಷ್ಯ ಬರೆಯಲು ಮುಂದಾಗಿದ್ದು, ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ತಯಾರಿಕೆ ಮತ್ತು ನಾವೀನ್ಯತೆಯ ತೊಟ್ಟಿಲನ್ನಾಗಿ ಪ್ರತಿಷ್ಠಾಪಿಸಲಿದೆ ಎಂದರು.

ಈ ಸುದ್ದಿಯನ್ನೂ ಓದಿ | Hema Malini: ಕುಂಭಮೇಳದಲ್ಲಿ ಜನರು ಹಸಿವೆಯಿಂದ ಸಾಯುತ್ತಿದ್ದಾರೆ; ಎಸ್‌ಪಿ ಮುಖಂಡರ ಆರೋಪಕ್ಕೆ ಹೇಮಾ ಮಾಲಿನಿ ಹೇಳಿದ್ದೇನು?

ತಂತ್ರಜ್ಞಾನದ ಬಳಕೆ, ಹೂಡಿಕೆ ಆಕರ್ಷಣೆ ಮತ್ತು ಸ್ಪರ್ಧಾತ್ಮಕ ಉದ್ಯಮಗಳ ಸ್ಥಾಪನೆಯೇ ಭವಿಷ್ಯದ ಆರ್ಥಿಕ ಬೆಳವಣಿಗೆಯ ನಿರ್ಣಾಯಕ ಶಕ್ತಿಗಳಾಗಿವೆ. ಇದಕ್ಕಾಗಿ ಕೈಗಾರಿಕಾ ರಂಗದಲ್ಲಿ ಡಿಜಿಟಲ್ ಪರಿವರ್ತನೆಯನ್ನು ಅಳವಡಿಸಿ ಕೊಳ್ಳಲಾಗುತ್ತಿದೆ. ಜತೆಗೆ ಇಂಗಾಲವನ್ನು ಕಡಿಮೆ ಹೊರಸೂಸುವ ಹಾಗೂ ಪರಿಸರಸ್ನೇಹಿ ಉಪಕ್ರಮಗಳಿಗೂ ಗಮನ ಹರಿಸಲಾಗಿದೆ. 55 ಲಕ್ಷ ಜನರಿಗೆ ಉದ್ಯೋಗ ನೀಡಿರುವ 8 ಲಕ್ಷ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ವಿಶೇಷ ಒತ್ತು ಕೊಡಲಾಗಿದೆ ಎಂದು ಅವರು ವಿವರಿಸಿದ್ದಾರೆ.