ದುಬೈ: ಚಾಂಪಿಯನ್ಸ್ ಟ್ರೋಫಿ(Champions Trophy) ಆರಂಭಕ್ಕೆ ಕೇವಲ ಎರಡು ದಿನ ಬಾಕಿ ಇರುವಾಗಲೇ ಭಾರತ ತಂಡಕ್ಕೆ ಆಘಾತವೊಂದು ಎದುರಾಗಿದೆ. ಗಾಯದಿಂದ ಜಸ್‌ಪ್ರೀತ್ ಬುಮ್ರಾ ಅಲಭ್ಯರಾದ ಬೆನ್ನಲ್ಲೇ ಇದೀಗ ವಿಕೆಟ್ ಕೀಪರ್ ಕಮ್ ಬ್ಯಾಟರ್ ರಿಷಭ್ ಪಂತ್(Rishabh Pant Injury) ಅವರು ಅಭ್ಯಾಸ ವೇಳೆ ಗಾಯಗೊಂಡಿದ್ದಾರೆ. ಪಂತ್ ಭಾನುವಾರ ಫೀಲ್ಡಿಂಗ್ ಅಭ್ಯಾಸ ನಡೆಸುತ್ತಿದ್ದ ವೇಳೆ ಮಂಡಿಗೆ ಚೆಂಡು ಬಡಿದು ಗಾಯಗೊಂಡರು. ಗಾಯದಿಂದ ನರಳಿದ ಅವರನ್ನು ವೈದ್ಯಕೀಯ ತಂಡ ಉಪಚರಿಸಿದೆ. ಅಂದು ಅಪಘಾತದಲ್ಲಿ ಗಾಯಗೊಂಡ ಕಾಲಿನ ಮಂಡಿಗೆ ಚೆಂಡು ಬಡಿದಿದೆ. ಹೀಗಾಗಿ ಮುನ್ನೆಚ್ಚರಿಕ ಕ್ರಮವಾಗಿ ಪಂತ್‌ಗೆ ಸೋಮವಾರ ಅಭ್ಯಾಸ ನಡೆಸದಂತೆ ಬಿಸಿಸಿಐ ಸೂಚಿಸಿದೆ ಎಂದು ತಿಳಿದಿದು ಬಂದಿದೆ.
ಮೀಸಲು ಆಟಗಾರನಾಗಿದ್ದ ಭಾರತದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ರಣಜಿ ಸೆಮಿಫೈನಲ್ ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿದ್ದ ವೇಳೆ ಗಾಯಗೊಂಡಿದ್ದಾರೆ. ಹೀಗಾಗಿ ಅವರು ಕೂಡ ಚಾಂಪಿಯನ್ಸ್ ಟ್ರೋಫಿ ಮೀಸಲು ಪಟ್ಟಿಯಿಂದ ಹೊರಬೀಳುವ ಸಾಧ್ಯತೆ ಇದೆ. ಸದ್ಯಕ್ಕೆ ಪಂತ್ ಗಾಯದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ.
ಶನಿವಾರ ದುಬೈ ತಲುಪಿದ್ದ ಟೀಮ್ ಇಂಡಿಯಾ ಆಟಗಾರರು ಭಾನುವಾರ ಸುಡು ಬಿಸಿಲನ್ನೂ ಲೆಕ್ಕಿಸದೆ ಮುಖ್ಯ ಕೋಚ್ ಗೌತಮ್ ಗಂಭೀರ್, ಬ್ಯಾಟಿಂಗ್ ಕೋಚ್ ಅಭಿಷೇಕ್ ಶರ್ಮ ಮತ್ತು ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಮಾರ್ಗದರ್ಶನದಲ್ಲಿ ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದ್ದರು. ಅಭ್ಯಾಸ ನಡೆಸುತ್ತಿರುವ ಫೋಟೊವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, 'ಸಿದ್ಧತೆಗಳು ಆರಂಭವಾಗಿದೆ' ಎಂದು ಬರೆದುಕೊಂಡಿದ್ದಾರೆ. ಭಾರತ ಫೆ.20 ರಂದು ಬಾಂಗ್ಲಾದೇಶ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.
ಭಾರತ ತಂಡ
ರೋಹಿತ್ ಶರ್ಮ (ನಾಯಕ), ಶುಭಮಾನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ರಿಷಭ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಮೊಹಮದ್ ಶಮಿ, ಅರ್ಷದೀಪ್ ಸಿಂಗ್.