ಸಂಭಾಲ್: ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭಾನುವಾರ ಮಸೀದಿಯೊಂದರ ಸಮೀಕ್ಷೆ ವೇಳೆ ನಡೆದ ಹಿಂಸಾಚಾರ(Jama mosque Violence)ದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇನ್ನು ಮುಂಜಾಗೃತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳನ್ನು ಮುಚ್ಚಲಾಗಿದೆ. ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಭಾನುವಾರ ಬೆಳಿಗ್ಗೆ ಸಂಭಾಲ್ನಲ್ಲಿ ಘರ್ಷಣೆ ಕಾರಣವಾಗಿತ್ತು. ಇನ್ನು ಘರ್ಷಣೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ
ಈ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಪ್ರತಿಕ್ರಿಯಿಸಿದ್ದು, ಪ್ರತಿಭಟನಾಕಾರರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ಎಸೆದರು. ಇನ್ನು ಗುಂಪು ಚದುರಿಸಲು ಅಶ್ರುವಾಯು ಸಿಡಿಸಿ ಲಾಠಿಚಾರ್ಜ್ ನಡೆಸಿದ್ದರು. ಈ ಗಲಾಟೆಯಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ತಲೆಗೆ ಪೆಟ್ಟಾಗಿರುವ ಕಾನ್ಸ್ಟೇಬಲ್ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 21 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.
ಸಂಭಾಲ್ ತಹಸಿಲ್ನಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಜಿಲ್ಲಾಡಳಿತವು 12 ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ನವೆಂಬರ್ 25 ರಂದು ರಜೆ ಘೋಷಿಸಿದೆ. ಅಧಿಕಾರಿಗಳ ಆದೇಶವಿಲ್ಲದೆ ಯಾವುದೇ ಹೊರಗಿನವರು, ಸಾಮಾಜಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಪ್ರತಿನಿಧಿಗಳು ಸಂಭಾಲ್ ಪ್ರವೇಶಿಸುವುದನ್ನು ನಿಷೇಧಿಸಿ ಅಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಅಖಿಲೇಶ್ ಯಾದವ್ ಕಿಡಿ
ಘಟನೆ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಸಮೀಕ್ಷೆಯ ಹೆಸರಿನಲ್ಲಿ ಉದ್ವಿಗ್ನತೆಯನ್ನು ಹರಡುವ ಪಿತೂರಿಯನ್ನು ಸುಪ್ರೀಂ ಕೋರ್ಟ್ ತಕ್ಷಣ ಅರಿಯಬೇಕು. ಸಾಮಾಜಿಕ ಸಾಮರಸ್ಯವನ್ನು ಕದಡುವ ಉದ್ದೇಶದಿಂದ ತಮ್ಮೊಂದಿಗೆ ಘೋಷಣೆಗಳನ್ನು ಕರೆದೊಯ್ದವರ ವಿರುದ್ಧ ಶಾಂತಿ ಮತ್ತು ಸೌಹಾರ್ದತೆ ಕದಡುವ ಪ್ರಕರಣವನ್ನು ದಾಖಲಿಸಬೇಕು ಮತ್ತು ವಕೀಲರ ಸಂಘವು ಅವರ ವಿರುದ್ಧ ಶಿಸ್ತು ಮತ್ತು ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
सर्वे के नाम पर तनाव फैलाने की साज़िश का ‘सर्वोच्च न्यायालय’ तुरंत संज्ञान ले और जो अपने साथ सामाजिक सद्भाव बिगाड़ने के उद्देश्य से नारेबाज़ों को ले गये, उनके ख़िलाफ़ शांति और सौहार्द बिगाड़ने का मुक़दमा दर्ज हो और उनके ख़िलाफ़ ‘बार एसोसिएशन’ भी अनुशासनात्मक और दंडात्मक कार्रवाई… pic.twitter.com/9Fj30K4aLm
— Akhilesh Yadav (@yadavakhilesh) November 24, 2024
ಏನಿದು ಘಟನೆ?
ಉತ್ತರ ಪ್ರದೇಶದ ಸಂಭಾಲ್ದಲ್ಲಿರುವ ಶಾಹಿ ಜಾಮಾ ಮಸೀದಿಯು ಈ ಮೊದಲು ದೇವಾಲಯವಾಗಿತ್ತೇ ಎಂದು ಪರಿಶೀಲನೆ ನಡೆಸಲು ಹೋದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮೊಘಲರು ಮಸೀದಿ ನಿರ್ಮಿಸಲು ದೇವಾಲಯವನ್ನು ಕೆಡವಲಾಗಿತ್ತು. ಇದು ಮೊದಲು ಹರಿಹರ ದೇವಾಲಯವಾಗಿತ್ತು ಎಂಬ ವಕೀಲ ವಿಷ್ಣು ಶಂಕರ್ ಜೈನ್ ಅವರ ಅರ್ಜಿಯ ಮೇರೆಗೆ ನ್ಯಾಯಾಲಯವು ಸಮೀಕ್ಷೆಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ (ನ. 24) ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲು ಹೋಗಿತ್ತು. ಆದರೆ ಏಕಾಏಕಿ ಸ್ಥಳೀಯರು ಅಧಿಕಾರಿಗಳ ತಂಡದ ಮೇಲೆ ದಾಳಿ ನಡೆಸಿದ್ದಾರೆ.
ಸಮೀಕ್ಷಾ ತಂಡ ಆಗಮಿಸುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಪ್ರತಿಭಟನೆ ಆರಂಭಿಸಿದರು. ಜನರ ಗುಂಪು ಪೊಲೀಸರೊಂದಿಗೆ ವಾಗ್ವಾದ ನಡೆಸಿ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದೆ. ಘಟನೆಯಲ್ಲಿ ಹಲವು ಅಧಿಕಾರಿಗಳು ಹಾಗೂ ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯುಗಳನ್ನು ಸಿಡಿಸಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.