ಸನ್ನಡತೆ ಆಧಾರದ ಮೇಲೆ 28 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
Cabinet Meeting: ಒಟ್ಟು 45 ಪ್ರಕರಣಗಳ ಪೈಕಿ 28 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
-
ಬೆಂಗಳೂರು, ಆಗಸ್ಟ್ 21: ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸನ್ನಡತೆ ಹೊಂದಿರುವ ಅರ್ಹ ಬಂಧಿಗಳ ಪೈಕಿ 28 ಮಂದಿಯನ್ನು ಅವಧಿಪೂರ್ವ ಬಿಡುಗಡೆ ಮಾಡಲು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ (Cabinet Meeting) ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಒಟ್ಟು 45 ಪ್ರಕರಣಗಳ ಪೈಕಿ 28 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮತ್ತೊಂದು ಒಂದು ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯದ ಸಹಮತಿ ಪಡೆದು ಅವಧಿಪೂರ್ವ ಬಿಡುಗಡೆ ಮಾಡಲು ಅನುಮೋದಿಸಲಾಗಿದೆ. ಹೀಗಾಗಿ ಒಟ್ಟು 29 ಜೀವಾವಧಿ ಶಿಕ್ಷಾ ಬಂಧಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ಒಟ್ಟು 45 ಪ್ರಕರಣಗಳನ್ನು ಪರಿಶೀಲಿಸಲಾಗಿತ್ತು. ಸರ್ಕಾರದ ಮಾರ್ಗಸೂಚಿಗಳು, ಬಂಧಿಗಳ ಸನ್ನಡತೆ, ಜೈಲು ವಾಸದ ಅವಧಿ ಸೇರಿದಂತೆ ನಿಗದಿತ ಮಾನದಂಡಗಳ ಆಧಾರದ ಮೇಲೆ ಪ್ರಕರಣಗಳನ್ನು ಪರಿಶೀಲಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಸಂಪುಟದ ನಿರ್ಧಾರವನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗುವುದು ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಾರಾಗೃಹ ಇಲಾಖೆಗೆ ಅತ್ಯಾಧುನಿಕ ಉಪಕರಣಗಳ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ
ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ (Cabinet Meeting) ನೀಡಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಕಾರಾಗೃಹಗಳ ಭದ್ರತೆ, ಮೇಲ್ವಿಚಾರಣೆ ಹಾಗೂ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ.
ಕಾರಾಗೃಹಗಳಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳು, ಪೋರ್ಟಬಲ್ ಸಿಗ್ನಲ್ ಜಾಮರ್‌ಗಳು ಹಾಗೂ ಕೈದಿಗಳ ದೂರವಾಣಿ ಕರೆ ವ್ಯವಸ್ಥೆ (Prisoner Calling System) ಸೇರಿದಂತೆ ಹಲವು ಆಧುನಿಕ ಉಪಕರಣಗಳನ್ನು ಅಳವಡಿಸಲಾಗುವುದು. ಇದರಿಂದ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಭದ್ರತಾ ಮೇಲ್ವಿಚಾರಣೆಯನ್ನು ಪರಿಣಾಮಕಾರಿಗೊಳಿಸಲು ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
“ಬದಲಾಗುತ್ತಿರುವ ಸವಾಲುಗಳಿಗೆ ಅನುಗುಣವಾಗಿ ಕಾರಾಗೃಹ ಇಲಾಖೆಯಲ್ಲೂ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವುದು ಅಗತ್ಯ. ಸುರಕ್ಷತೆ ಮತ್ತು ಮೇಲ್ವಿಚಾರಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ,” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.