ಬೆಂಗಳೂರು: ಕುಟುಂಬದವರಿಗೆ ಮೋಸ ಮಾಡಿ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಸಚಿವ ಡಿ.ಸುಧಾಕರ್ (Minister D Sudhakar) ವಿರುದ್ಧ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High court), ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಪರಿಶಿಷ್ಟ ಕುಟುಂಬದ ಜಮೀನು ಕಬಳಿಸಿ, ಅವರ ಮೇಲೆ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿ ಆದೇಶಿಸಿದೆ.
ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸೆವನ್ ಹಿಲ್ಸ್ ಡೆವಲಪರ್ಸ್ ಆ್ಯಂಡ್ ಟ್ರೇಡರ್ಸ್‌ನ ನಿರ್ದೇಶಕರೂ ಆಗಿರುವ ಡಿ.ಸುಧಾಕರ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಅರ್ಜಿಯನ್ನು ಪುರಸ್ಕರಿಸಿದೆ. ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ನ್ಯಾಯಿಕ ಪ್ರಕ್ರಿಯೆಯನ್ನು ಪೀಠ ರದ್ದುಪಡಿಸಿತು.