CT Ravi: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ; ಸಿ.ಟಿ.ರವಿಗೆ ಬಿಗ್ ರಿಲೀಫ್
ಇತ್ತೀಚೆಗೆ ಬಿಜೆಪಿ ನಾಯಕ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಡಿದ್ದಾರೆ ಎನ್ನಲಾದ ಮಾತು ರಾಜ್ಯ ರಾಜಕೀಯದಲ್ಲೇ ಸಂಚಲನ ಸೃಷ್ಟಿಸಿತ್ತು. ಅವರ ವಿರುದ್ಧ ಕಾಂಗ್ರೆಸ್ ಬೀದಿಗಳಿದು ಹೋರಾಟ ನಡೆಸಿತ್ತು. ಜತೆಗೆ ದೂರು ನೀಡಲಾಗಿತ್ತು. ಇದೀಗ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್ ಸಿ.ಟಿ.ರವಿ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಎಫ್‌ಐಆರ್ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ಸಿ.ಟಿ.ರವಿ.

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ(CT Ravi) ಅವರಿಗೆ ಕರ್ನಾಟಕ ಹೈಕೋರ್ಟ್ (Karnataka high court) ರಿಲೀಫ್ ನೀಡಿದೆ. ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಎಫ್‌ಐಆರ್ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್ನಲ್ಲಿ ಗುರುವಾರ (ಜ. 30) ನಡೆಯಿತು. ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ. 20ರವರೆಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಜತೆಗೆ ದೂರು ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಸಿ.ಟಿ. ರವಿ ಪರ ವಕೀಲರು ಹೇಳಿದ್ದೇನು?
ಸಿ.ಟಿ. ರವಿ ಪರ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, ʼʼಸದನದೊಳಗೆ ಭೀತಿರಹಿತವಾಗಿ ಮಾತನಾಡಲು ಅವಕಾಶವಿದೆ. ಮಾನನಷ್ಟ ಪ್ರಕರಣದ ಭೀತಿಯಿಲ್ಲದೇ ಚರ್ಚೆ ನಡೆಸಬಹುದು. ಮಹಿಳೆ ಗೌರವಕ್ಕೆ ಧಕ್ಕೆಯಾಗುವ ಮಾತುಗಳಿದ್ದರೂ ಸಭಾಪತಿ ಕ್ರಮ ಕೈಗೊಳ್ಳಬಹುದು. ವಿಧಾನ ಪರಿಷತ್‌ನಲ್ಲಿ ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆʼʼ ಎಂದು ಹೇಳಿದರು.
ಏನಿದು ಪ್ರಕರಣ?
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿ.ಟಿ. ರವಿ ಅವರು ಸಚಿವೆ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ. ರವಿ ಅವರು ಲಕ್ಷ್ಮೀ ಹೆಬ್ಬಾಳಕರ್ ಅವರ ಕುರಿತು ಅವಹೇಳನಕಾರಿ ಪದ ಬಳಸಿ ನಿಂದಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಆರೋಪವನ್ನು ಸಿಟಿ ರವಿ ಅಲ್ಲಗಳೆದಿದ್ದಾರೆ.
ಈ ಸುದ್ದಿಯನ್ನೂ ಓದಿ: CT Ravi: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ; ಬಿಜೆಪಿ ನಾಯಕ ಸಿ.ಟಿ.ರವಿ ಅರೆಸ್ಟ್
ರವಿ ಅವರು ಅಶ್ಲೀಲ ಪದ ಬಳಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿದೆ ಎಂದು ಹೇಳಲಾಗಿದೆ. ಘಟನೆ ರಾಜ್ಯದಾದ್ಯಂತ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಸಿ.ಟಿ.ರವಿ ಅವರನ್ನು ಬಂಧಿಸಿದ್ದ ಬೆಳಗಾವಿ ಪೊಲೀಸರು ರಾತ್ರಿ ಇಡೀ ಅವರನ್ನು ಪೊಲೀಸ್ ವಾಹನದಲ್ಲಿ ಸುತ್ತಾಡಿಸಿದ್ದರು. ಈ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿತ್ತು. ರವಿ ಅವರನ್ನು ಎನ್ಕೌಂಟರ್ ಮಾಡಲು ಸರ್ಕಾರ ಸಂಚು ಹೂಡಿತ್ತು ಎಂದು ಕೆಲವು ಮಂದಿ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದರು.