ಮಂಡ್ಯ : ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ (Mandya)ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಅಣೆಕಟ್ಟು (KRS dam) ಭರ್ತಿಯಾಗಿದ್ದು, ಸದ್ಯ 50 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ (Cauvery River) ಪಾತ್ರದಲ್ಲಿ ಮತ್ತೆ ಪ್ರವಾಹ (flood) ಭೀತಿ ಎದುರಾಗಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್‌ಎಸ್ ಜಲಾಶಯ ಜೂನ್ ಮೊದಲ ವಾರದಲ್ಲೇ ಭರ್ತಿಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಿಂದಾಗಿ ಡ್ಯಾಂನ ಒಳಹರಿವು ಹೆಚ್ಚಾಗಿದೆ.
ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಹಮಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲೂ ಎರಡು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಇದ್ದು, ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಇನ್ನು ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೂ 2 ದಿನ ಮಳೆಯಾಗುವ ಕಾರಣ ರಜೆ ಘೋಷಿಸಿ ಡಿಸಿ ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ, ತೀರ್ಥಹಳ್ಳಿ ಹಾಗೂ ಸಾಗರ ತಾಲೂಕಿಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ತೀರ್ಥಹಳ್ಳಿ ತಹಶೀಲ್ದಾರ್ ರಂಜಿತ್ ಹಾಗೂ ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಹಾಸನ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಸಕಲೇಶಪುರ, ಬೇಲೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಯ ಅಂಗನವಾಡಿ, ಶಾಲೆಗಳಿಗೂ ರಜೆ ನೀಡಲಾಗಿದೆ. ಚಿಕ್ಕಮಗಳೂರಿನ ಕೆಲ ತಾಲೂಕುಗಳ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಿಗೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿಯ ಜಿಲ್ಲೆಯ ಐದು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು ಹಾಗೂ ಸವದತ್ತಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಾವಣಗೆರೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: Operation Sindoor: ರಾಜ್ಯದಲ್ಲಿ ಅಲರ್ಟ್, ಕೆಆರ್‌ಎಸ್, ಲಿಂಗನಮಕ್ಕಿ ಸೇರಿ ಎಲ್ಲ ಅಣೆಕಟ್ಟುಗಳಿಗೆ ಬಿಗಿ ಭದ್ರತೆ