ಬೆಂಗಳೂರು, ಜ. 17, 2025: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ (MUDA Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Directorate of Enforcement -ED) ಅಂದಾಜು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಪಿಎಂಎಲ್ಎ (Prevention of Money Laundering Act) ಕಾಯ್ದೆ ಅಡಿ ಸ್ಥಿರಾಸ್ತಿಗಳನ್ನು ತಾತ್ಕಾಲಿಕ ಮುಟ್ಟುಗೋಲು ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟರಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈ ಪ್ರಕರಣದ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.
ಎಕ್ಸ್‌ನಲ್ಲಿ ಮಾಹಿತಿ ನೀಡಿದ ಇಡಿ
ಈ ಬಗ್ಗೆ ಇಡಿ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ. ʼʼಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಂಎಲ್ಎ 2002ರ ನಿಬಂಧನೆಗಳ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟರಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾದ 300 ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯದ 142 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆʼʼ ಎಂದು ಬರೆದುಕೊಂಡಿದೆ.
ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಪತ್ನಿ ಬಿ.ಎಂ.ಪಾರ್ವತಿ ಅವರ ಹೆಸರಿನಲ್ಲಿ 14 ನಿವೇಶನಗಳಿಗೆ ಪರಿಹಾರ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸುದ್ದಿಯನ್ನೂ ಓದಿ: BY Vijayendra: ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಬಿ.ವೈ.ವಿಜಯೇಂದ್ರ
ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ನೀಡಿದ ದೂರು ದೂರಿನನ್ವಯ ತನಿಖೆ ನಡೆಸಿದ್ದ ಇಡಿ ಈ ಕ್ರಮ ಕೈಗೊಂಡಿದೆ. ಈ ಕ್ರಮ ಸಿದ್ದರಾಮಯ್ಯ ಅವರ ರಾಜಕೀಯ ಜೀವನದ ಮೇಲಡ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.