ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027ರ ವಿಶ್ವಕಪ್ ಆಡಬೇಕೆಂದ ಯೋಗರಾಜ್ ಸಿಂಗ್!
Yograj Singh backs Virat Kohli, Rohit Sharma: ಇತ್ತೀಚೆಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿರುವ ಭಾರತ ತಂಡದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ತನಕ ನಿವೃತ್ತಿ ಪಡೆಯಬಾರದು ಎಂದು ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಆಗ್ರಹಿಸಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ನವದೆಹಲಿ: ಇತ್ತೀಚೆಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಅವರನ್ನು ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಶ್ಲಾಘಿಸಿದ್ದಾರೆ. 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯವರೆಗೂ ಈ ಇಬ್ಬರೂ ನಿವೃತ್ತಿ ಪಡೆಯಬಾರದು ಎಂದು ಅವರು ಆಗ್ರಹಿಸಿದ್ದಾರೆ. ಪಾಕಿಸ್ತಾನದ ಆತಿಥ್ಯದಲ್ಲಿ ಇತ್ತೀಚೆಗೆ ನಡೆದಿದ್ದ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಬಳಿಕ ಹಿರಿಯ ಬ್ಯಾಟ್ಸ್‌ಮನ್‌ಗಳು ಏಕದಿನ ಕ್ರಿಕೆಟ್‌ಗೆ ವಿದಾಐ ಹೇಳಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಸುದ್ದಿಗೋಷ್ಠಿಯಲ್ಲಿ ರೋಹಿತ್ ಶರ್ಮಾ ನಿವೃತ್ತಿ ಬಗೆಗಿನ ಊಹಾಪೋಹಗಳನ್ನು ತಳ್ಳಿ ಹಾಕಿದ್ದರು. ಆ ಮೂಲಕ ಇನ್ನಷ್ಟು ದಿನಗಳ ಕಾಲ 50 ಓವರ್‌ಗಳ ಕ್ರಿಕೆಟ್ ಆಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಭಾನುವಾರ ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಫೈನಲ್ ಹಣಾಹಣಿಯಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ ತಂಡ ತನ್ನ ಪಾಲಿನ 251 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ 252 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡ, ರೋಹಿತ್ ಶರ್ಮಾ (76 ರನ್), ಕೆಎಲ್ ರಾಹುಲ್, ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಬಲದಿಂದ 254 ರನ್‌ಗಳನ್ನು ಗಳಿಸಿ ಗೆಲುವಿನ ದಡ ಸೇರಿತ್ತು. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು.
IND vs NZ: ನ್ಯೂಜಿಲೆಂಡ್‌ಗೆ ಮಣ್ಣು ಮುಕ್ಕಿಸಿ ಮೂರನೇ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ!
ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಯೋಗರಾಜ್ ಸಿಂಗ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಟೂರ್ನಿಯ ಕಡೆಗೆ ಗಮನ ನೀಡಬೇಕು ಹಾಗೂ ಈ ಟೂರ್ನಿಯನ್ನು ಹೇಗೆ ಗೆಲ್ಲಲು ತಮ್ಮ ಗರುಷ್ಠ ಶಕ್ತಿಯನ್ನು ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಅದ್ಭುತ ಪಯಣವನ್ನು ಹೊಂದಿದೆ. ಕಳೆದ ವರ್ಷ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ 2024ರ ಟಿ20 ವಿಶ್ವಕಪ್ ಹಾಗೂ ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ಇದಕ್ಕೂ ಮುನ್ನ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಫೈನಲ್‌ಗೆ ಅರ್ಹತೆ ಪಡೆದಿತ್ತು. ಆದರೆ, ಪ್ರಶಸ್ತಿ ಪಂದ್ಯದಲ್ಲಿ ಸೋತು ರನ್ನರ್ ಅಪ್ ಆಗಿತ್ತು.
IND vs NZ: ರೋಹಿತ್ ಶರ್ಮಾ ಬ್ಯಾಟಿಂಗ್‌ನಿಂದ ಬೌಲರ್‌ಗಳು ಭಯ ಬಿದ್ದಿದ್ದರೆಂದ ಮಿಚೆಲ್ ಸ್ಯಾಂಟ್ನರ್!
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಯೋಗರಾಜ್ ಸಿಂಗ್ ಶ್ಲಾಘನೆ
"ತಾನು ನಿವೃತ್ತಿ ಪಡೆಯುವುದಿಲ್ಲ ಎಂದು ರೋಹಿತ್ ಶರ್ಮಾ ಹೇಳಿರುವುದು ಒಳ್ಳೆಯ ಸಂಗತಿಯಾಗಿದೆ. ಚೆನ್ನಾಗಿ ಹೇಳಿದ್ದೀರಿ ನಮ್ಮ ಮಗನೇ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಯಾರೊಬ್ಬರೂ ನಿವೃತ್ತಿ ಕೇಳಲು ಸಾಧ್ಯವಿಲ್ಲ. 2027ರ ಐಸಿಸಿ ಏಕದಿನ ವಿಶ್ವಕಪ್ ಗೆದ್ದ ಬಳಿಕ ಒಡಿಐ ಕ್ರಿಕೆಟ್‌ಗೆ ವಿದಾಯ ಹೇಳಬೇಕೆಂದು ಅವರು ಯೋಚನೆ ಮಾಡಬೇಕು. ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದಕ್ಕೂ ಮೊದಲೇ ಈ ಮಾತನ್ನು ಹೇಳಿದ್ದೇನೆ," ಎಂದು ಯೋಗರಾಜ್ ಸಿಂಗ್ ತಿಳಿಸಿದ್ದಾರೆ.
"ಕೆಲವು ಜನರು ರೋಹಿತ್ ಶರ್ಮಾ ಅವರ ಫಿಟ್‌ನೆಸ್ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ನಿಮ್ಮ ಫಿಟ್‌ನೆಸ್ ಹೇಗಿದೆ ಎಂದು ನಾನು ಅವರಿಗೆ (ಕಾಂಗ್ರೆಸ್ ನಾಯಕಿ ಶಾಮ ಮೊಹಮ್ಮದ್) ಪ್ರಶ್ನೆಯನ್ನು ಕೇಳುತ್ತೇನೆ. ಆಟಗಾರರ ಬಗ್ಗೆ ಕಾಮೆಂಟ್ ಹಾಕುವುದು ನಿಮಗೆ ಸೂಕ್ತವಾಗುವುದಿಲ್ಲ," ಎಂದು ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಹೇಳಿದ್ದಾರೆ.