Thursday, 26th December 2024

SM Krishna: ಎಸ್.ಎಂ.ಕೃಷ್ಣಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ; ರಾಜ್ಯ ಸರ್ಕಾರಕ್ಕೆ ಆಗ್ರಹ

ಬೆಂಗಳೂರು: ರಾಜ್ಯ ರಾಜಕಾರಣದ ಅಜಾತಶತ್ರು, ದೂರದೃಷ್ಟಿಯ ನೇತಾರ ಎಸ್‌.ಎಂ.ಕೃಷ್ಣ (SM Krishna) ಅವರಿಗೆ ಬುಧವಾರ ಅಂತಿಮ ವಿದಾಯ ಹೇಳಲಾಗಿದೆ. ರಾಜ್ಯದ ಅಭಿವೃದ್ಧಿಗೆ ಶ್ರಮಿಸಿರುವ ಎಸ್‌.ಎಂ.ಕೃಷ್ಣ ಅವರಿಗೆ ಇದೀಗ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಎಸ್‌.ಎಂ.ಕೃಷ್ಣ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಎಂದು ರಾಜಕೀಯ ನಾಯಕರು ಸೇರಿ ಸಾರ್ವಜನಿಕ ವಲಯದಿಂದ ಒತ್ತಾಯ ಕೇಳಿಬಂದಿದೆ.

ಈ ಬಗ್ಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.

ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ |

ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು: ದಿನೇಶ್‌ ಗೂಳಿಗೌಡ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಆರು ದಶಕಗಳ ಸುದೀರ್ಘ ಅವಧಿಗೆ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿದ್ದವರು. ತಾವು ಅಲಂಕರಿಸಿದ ಹುದ್ದೆಗಳಿಗೆ ಅವರು ನ್ಯಾಯ ಒದಗಿಸಿಕೊಟ್ಟ ಒಬ್ಬ ಶ್ರೇಷ್ಠ ರಾಜಕಾರಣಿ. ಅವರ ಸಾಧನೆಯನ್ನು ಪರಿಗಣಿಸಿ ಭಾರತ ಸರ್ಕಾರವು ಈಚೆಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಈಗ ರಾಜ್ಯ ಸರ್ಕಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | SM Krishna: ಎಸ್‌.ಎಂ. ಕೃಷ್ಣ ಪಂಚಭೂತಗಳಲ್ಲಿ ಲೀನ; ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರದ ಪ್ರಜಾಪ್ರಭುತ್ವ ನಾಲ್ಕು ಸ್ತಂಭಗಳಾದ ವಿಧಾನಸಭೆ, ವಿಧಾನಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿ ಕಳೆದ ಅರವತ್ತು ವರ್ಷಗಳ ಕಾಲ ನಾಡಿನ, ರಾಷ್ಟ್ರದ ಸೇವೆಗೈದ ಕೃಷ್ಣ ರವರು ತಾವು ನಿರ್ವಹಿಸಿದ ಪ್ರತಿ ಹುದ್ದೆಯಲ್ಲೂ ಹೆಜ್ಜೆಗುರುತು ಮೂಡಿಸಿದವರು ಎಸ್‌.ಎಂ. ಕೃಷ್ಣ ಅವರು. ಇವರ ನಿಧನ ತೀವ್ರ ದುಃಖ ತಂದಿದೆ. ಇವರ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.