ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು 'ಅಯೋಗ್ಯ' ಎಂದು ಕರೆದ ಆರೋಪಕ್ಕೆ ಸಂಬಂಧಿಸಿದಂತೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಸುಪ್ರೀಂ ಕೋರ್ಟ್ (Supreme court) ರದ್ದುಗೊಳಿಸಿದೆ.
ಮಾನಹಾನಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಮತ್ತು ಎನ್ ಕೋಟೀಶ್ವರ ಸಿಂಗ್ ಅವರಿದ್ದ ಪೀಠ ಈ ತೀರ್ಪು ನೀಡಿದೆ. 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಸೂಲಿಬೆಲೆ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಯೋಗ್ಯ ಎಂದು ನಿಂದಿಸಿದ್ದಲ್ಲದೇ ಆಧಾರರಹಿತ ಸುಳ್ಳು ಭಾಷಣ ಮಾಡಿದ್ದಾರೆ ಎಂದು ಕಲಬುರ್ಗಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರು ಕಲಬರ್ಗಿಯ ಬ್ರಹ್ಮಾಪುರ ಠಾಣೆಯಲ್ಲಿ ದೂರು ನೀಡಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಸೂಲಿಬೆಲೆ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 153ಎ, 153ಬಿ, 505(2) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಸೆಕ್ಷನ್ 3(2) (v-a) ಅಡಿ ಪ್ರಕರಣ ದಾಖಲಿಸಲಾಗಿತ್ತು. ಇದನ್ನು ಸೂಲಿಬೆಲೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅಕ್ಟೋಬರ್ 2024ರಲ್ಲಿ ಎಸ್‌ಸಿ/ಎಸ್‌ಟಿ ಕಾಯಿದೆಯಡಿಯ ಆರೋಪಗಳನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ ಐಪಿಸಿಯ ಸೆಕ್ಷನ್‌ಗಳಡಿ ದಾಖಲಾಗಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಲು ಅವಕಾಶ ನೀಡಿತ್ತು.
ಹೀಗಾಗಿ ಸೂಲಿಬೆಲೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ತಾನು ಅಯೋಗ್ಯ ಎಂದು ಕರೆದ ಪದವನ್ನು ಇಂಗ್ಲಿಷ್‌ನ ರ‍್ಯಾಸ್ಕಲ್ (ನೀಚ) ಎಂದು ತಪ್ಪಾಗಿ ಅರ್ಥೈಸಿಕೊಂಡಿದೆ. ಅಯೋಗ್ಯ ಎಂಬ ಪದ ಹಲವು ಸಮಾನಾರ್ಥಕ ಪದ ಹೊಂದಿದ್ದು ಅದಕ್ಕೆ ಸಮೀಪದ ಪದ ನಿಷ್ಪ್ರಯೋಜಕ ಎಂದು ಇದೆ ಎಂಬುದಾಗಿ ಸೂಲಿಬೆಲೆ ವಾದಿಸಿದ್ದರು. ಈ ವಾದ ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿತು. ಸೂಲಿಬೆಲೆ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ವಕೀಲರಾದ ಸುಧಾಂಶು ಪ್ರಕಾಶ್ ಮತ್ತು ಸುಯೋಗ್ ಹೆರಳೆ ಅವರ ಮೂಲಕ ಸೂಲಿಬೆಲೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: Laxmi Hebbalkar: ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ ಎಂದ ಲಕ್ಷ್ಮಿ ಹೆಬ್ಬಾಳ್ಕರ್